Politics
ದೇವೇಗೌಡರನ್ನು ಟೀಕಿಸಿದ್ದ ಸಿಎಂ ಮೇಲೆ ಜೆಡಿಎಸ್ ಆಕ್ರೋಶ

ದೇವೇಗೌಡರನ್ನು ಟೀಕಿಸಿದ್ದ ಸಿಎಂ ಮೇಲೆ ಜೆಡಿಎಸ್ ಆಕ್ರೋಶ, ಸೊಕ್ಕಿನ ಮನುಷ್ಯ ಎಂದು ಸಿದ್ದರಾಮಯ್ಯ ವಿರುದ್ಧ ಕಿಡಿ, ನೈಸ್ ಯೋಜನೆ ವಾಪಸ್ ಪಡೆಯಲು ಯಾವ ಅತೀಂದ್ರ ಶಕ್ತಿ ಅಡ್ಡವಿದೆ ಎಂದು ಪ್ರಶ್ನೆ, ಸಿದ್ದಾರಮೆ ಆಟ ಯಾರಿಗೆ ಎಲ್ಲರಿಗೂ ಗೊತ್ತು ಎಂದು ಟಾಂಗ್
**
ಬೆಂಗಳೂರು: ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೆಗೌಡರ ಬಗ್ಗೆ ಲಘುವಾಗಿ ಮಾತನಾಡಿದ್ದ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಜೆಡಿಎಸ್ ಆಕ್ರೋಶ ವ್ಯಕ್ತಪಡಿಸಿದೆ.
ಈ ಎಕ್ಸ್ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಜೆಡಿಎಸ್ ಪಕ್ಷವು, ಸಿದ್ದರಾಮಯ್ಯ ಅವರು ಕರ್ನಾಟಕದ ಸೊಕ್ಕಿನ ಮನುಷ್ಯ ಟೀಕಾಪ್ರಹಾರ ನಡೆಸಿದೆ. ಅಲ್ಲದೆ, ನೈಸ್ ಯೋಜನೆಯನ್ನು ಸರಕಾರದ ವಶಕ್ಕೆ ಪಡೆಯಲು ಯಾವ ಅತೀಂದ್ರ ಶಕ್ತಿ ಅಡ್ಡವಿದೆ ಎಂದು ಪ್ರಶ್ನೆ ಮಾಡಿದೆ.
ಮಾಜಿ ಪ್ರಧಾನಿಗಳು ಹೇಳಿದ್ದರಲ್ಲಿ ಲವಲೇಶವೂ ಉತ್ಪ್ರೇಕ್ಷೆ ಇಲ್ಲ. ಸಿದ್ದರಾಮಯ್ಯ, ಡಿಕೆಶಿ ನೇತೃತ್ವದಲ್ಲಿ ಇಲ್ಲಿ ಕಾಂಗ್ರೆಸ್ ಅಂತ್ಯ ಕಾಣುತ್ತದೆ, ಹೌದು. ದೇಶವನ್ನು ಜಾತಿ,ಧರ್ಮದಿಂದಲೇ ವಿಭಜಿಸಿ ಪ್ರಜಾಪ್ರಭುತ್ವವನ್ನೇ ಅಂತ್ಯ ಕಾಣಿಸಲು ಹೊರಟಿದ್ದ ಕಾಂಗ್ರೆಸ್, ಚರಿತ್ರೆಯ ಕೊನೇಪುಟದಲ್ಲಿ ಏದುಸಿರು ಬಿಡುತ್ತಿದೆ ಎಂದು ಜೆಡಿಎಸ್ ತಿರುಗೇಟು ನೀಡಿದೆ.
ಗೌಡರ ಕೈ ಅನುಗ್ರಹದ ದ್ಯೋತಕ
ಶಾಪ ಹಾಕುವುದನ್ನು ಗೌಡರೆಂದೂ ಮಾಡಿಲ್ಲ, ಮಾಡುವುದೂ ಇಲ್ಲ.ಅವರ ಹಸ್ತ ಅಭಯ ಹಸ್ತ. ಅದು ಆಶೀರ್ವಾದ, ಅನುಗ್ರಹದ ದ್ಯೋತಕ. ಗುರುಸ್ವಾಮಿ ಎಂಬ ಅನಾಮಧೇಯ ವ್ಯಕ್ತಿ ಎದುರು ಸೋತ ನಿಮ್ಮನ್ನು ಅನುಗ್ರಹದಲ್ಲಿಯೇ ಅವರು ಅನುಗ್ರಹಿಸಿದ್ದು ಮರೆತಿರಾ? ಅಂದು ಆ ಕೈ ನಿಮ್ಮ ಕೈ ಹಿಡಿಯದಿದ್ದರೆ ನೀವಿಷ್ಟು ಎತ್ತರಕ್ಕೇರಲು ಸಾಧ್ಯವಿತ್ತೆ ಸಿದ್ದರಾಮಯ್ಯನವರೇ? ಎಂದು ಜೆಡಿಎಸ್, ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಿದೆ.
ಅಪರ ಬ್ರೂಟಸ್ ಎಂದು ಕಿಡಿ
ಜಾತ್ಯತೀತತೆ ನೀವಷ್ಟೇ ಹೇಳಬೇಕು ಸಿದ್ದರಾಮಯ್ಯನವರೇ? ಸಿಎಂ ಸಚಿವಾಲಯದ ಕೊಳಕು ಕೊಡವಿದರೆ ನಿಮ್ಮ ಢೋಂಗಿ ಜಾತ್ಯತೀತತೆಯ ಅಸಲಿ ಮುಖ ಕಳಚಿ ಬೀಳುತ್ತದೆ. ಅಭಿಪ್ರಾಯ, ಭಿನ್ನಾಭಿಪ್ರಾಯ, ಪ್ರಾಮಾಣಿಕತೆ, ಜಾತ್ಯತೀತತೆ.. ಈ ಪದಗಳೆಲ್ಲ ನಿಮಗೆ ಆಗಿ ಬರಲ್ಲ. ನಿಮ್ಮದೇನಿದ್ದರೂ ಏಕಾಭಿಪ್ರಾಯ. ಸರ್ವಾಧಿಕಾರ ಧೋರಣೆ, ತುಘಲಕ್ ಮನಃಸ್ಥಿತಿ. ದೇವೇಗೌಡರು ಸಾಮಾಜಿಕ ನ್ಯಾಯ, ಜಾತ್ಯತೀತತೆ, ನಂಬಿಕೆ, ವಿಶ್ವಾಸಾರ್ಹತೆ ಉಳ್ಳವರು ಆಗಿಲ್ಲದಿದ್ದಿದ್ದರೆ ನೀವು ಈವರೆಗೆ ಏನೇನೋ ಆಗಿದ್ದಿರಲ್ಲಾ… ಅದರಲ್ಲಿ ಏನೊಂದೂ ಆಗುತ್ತಿರಲಿಲ್ಲ. ನಿಮಗೆ ಏಣಿಯಾಗಿ, ಹೆಗಲಾಗಿದ್ದ ಅವರ ಬೆನ್ನಿಗಿರಿದ ‘ಅಪರ ಬ್ರೂಟಸ್’ ನೀವು. ಬೂಟಾಟಿಕೆ ಮಾಡಿಕೊಂಡೇ ರಾಜಕೀಯ ಬದುಕು ಕಟ್ಟಿಕೊಂಡವರು ನೀವು ಎಂದು ಜೆಡಿಎಸ್ ಕುಟುಕಿದೆ.
ಯಾರು, ಯಾರ ಸಂಗ ಮಾಡಿದ್ದರು? ಯಾವ ಗಾಳಿ ಯಾರಿಗೆ ಸೋಕಿತ್ತು? ನಿಮ್ಮ ಇಂಥ ಕಾಗಕ್ಕ,ಗೂಬ್ಬಕ್ಕ ಕಥೆಗಳ ಮೂಲಕ್ಕೆ ಹೋದರೆ ನೀವೇ ಬೆತ್ತಲೆ ಸ್ಥಿತಿಯಲ್ಲಿ ನಿಲ್ಲಬೇಕಾಗುತ್ತದೆ. ಅಂತಹ ಸ್ಥಿತಿ ತಂದುಕೊಳ್ಳಬೇಡಿ. ನಿಮ್ಮ ರಾಜಕೀಯ ಅಂತ್ಯಕಾಲ ಆನಂದವಾಗಿರಲಿ, ಅದಕ್ಕೆ ಕಳಂಕ ಮೆತ್ತಿಕೊಳ್ಳಬೇಡಿ ಎನ್ನುವುದು ನಮ್ಮ ಕಳಕಳಿಯ ಸಲಹೆ ಎಂದಿದೆ ಜೆಡಿಎಸ್.
ಸಿದ್ದಾರಮೆ ಆಟ ಯಾರಿಗೆ ಎಲ್ಲರಿಗೂ ಗೊತ್ತು
ನಿಮ್ಮಂಥ ಆತ್ಮಸಾಕ್ಷಿ ಹೀನರು ಇದ್ದರೆ ಕಾಂಗ್ರೆಸ್ ಅಂತ್ಯವಾಗುತ್ತದೆ, ನಿಜ. ಜೆಡಿಎಸ್ ಪಕ್ಷವನ್ನು ಅಂತ್ಯ ಕಾಣಿಸಲು ನೀವು ಆಡುತ್ತಿರುವ ‘ಸಿದ್ದಾರಮೆ ಆಟ’ ಯಾರಿಗೆ ಗೊತ್ತಿಲ್ಲ? ಇವತ್ತಿಗೂ ಕತ್ತಲಾದೊಡನೆ ನಮ್ಮ ಪಕ್ಷದ ನಾಯಕರ ಮನೆಗಳ ಮುಂದೆ ಠಳಾಯಿಸುವ ನಿಮ್ಮ ಕತ್ತಲು ಗಿರಾಕಿಗಳ ಬಗ್ಗೆ ಹೇಳಬೇಕೆ? ಜೆಡಿಎಸ್ ಅಂತ್ಯ ನಿಮ್ಮ ಕನಸು ಅಷ್ಟೇ. ಸೊಕ್ಕು ಎನ್ನುವುದು ನಿಮ್ಮ ಪೇಟೆಂಟ್. ಆ ನಿಮ್ಮ ಸದ್ಗುಣ(!?)ವನ್ನು ದೇವೇಗೌಡರಿಗೆ ಅಂಟಿಸುವ ಪಾಪದ ಕೆಲಸ ಮಾಡಬೇಡಿ. ಕರ್ನಾಟಕದ ‘ಸೊಕ್ಕಿನ ಮನುಷ್ಯ’ ಅಂತ ಯಾರಾದರೂ ಇದ್ದರೆ ಅದು ತಾವೇ ಸಿದ್ಧರಾಮಯ್ಯನವರೇ. ನಿಮ್ಮ ಪಕ್ಷದ ಪಡಸಾಲೆಗೆ ಬಂದರೆ ಅಲ್ಲಿರುವ ಪ್ರತಿ ಬಾಗಿಲು ನಿಮ್ಮ ಸೊಕ್ಕಿನ ಕಥೆಗಳನ್ನೇ ಹೇಳುತ್ತವೆ ಎಂದು ಜೆಡಿಎಸ್ ಆಕ್ರೋಶ ವ್ಯಕ್ತಪಡಿಸಿದೆ.
ಜನಾದೇಶವನ್ನು ದೇವೇಗೌಡರು ಎಂದೂ ಧಿಕ್ಕರಿಸಿಲ್ಲ. ಶಿರಸಾ ವಹಿಸಿದ್ದಾರೆ. ಅಂತಹ ಆಚಾರ, ವಿಚಾರ, ಸದ್ವಿಚಾರ, ಶಿಷ್ಟಾಚಾರವನ್ನು ನಿಮಗೆ ಕಲಿಸಿದ್ದೇ ಅವರು. ಆದರೆ, ಅಡ್ಡದಾರಿ ಆಯ್ಕೆ ಮಾಡಿಕೊಂಡ ನಿಮಗೆ ಇವೆಲ್ಲಾ ರುಚಿಸುತ್ತಿಲ್ಲ. ಸದ್ಯಕ್ಕೆ ನಿಮಗೆ ನೆಲ ಕಾಣುತ್ತಿಲ್ಲ. ನೆಲವೇ ಬುದ್ದಿ ಕಲಿಸುವ ಕಾಲ ಹತ್ತಿರದಲ್ಲಿದೆ. ಕಾಲ ಕ್ಷಣಿಕ. ಜೆಡಿಎಸ್, ಬಿಜೆಪಿ ಬಿ ಟೀಮ್ ಎನ್ನುವ ನೀವು ಚುನಾವಣೆ ಬಂದಾಗಲೆಲ್ಲಾ ಮಾಡುವ ಮೊದಲ ಕೆಲಸ ಮ್ಯಾಚ್ ಫಿಕ್ಸಿಂಗ್ & ಇನ್ನೊಂದು ಟೀಮ್ ಗೆ ಬಾಲಂಗೋಚಿ ಆಗುವುದು. 2023ರ ವಿಧಾನಸಭೆ ಚುನಾವಣೆಯಲ್ಲೂ ಇದೇ ಆಟ ಅಡಿದಿರಿ. ಆ ನಿಮ್ಮ ರಂಗಿನಾಟ, ಕಳ್ಳಾಟ ದೇಶ ರಾಜಕಾರಣಕ್ಕೆ ಮಾದರಿ!! ಏನಂತೀರಿ? ಎಂದು ಜೆಡಿಎಸ್ ಕೇಳಿದೆ.
ನೈಸ್ ಗೆ’ಅತೀಂದ್ರ ಶಕ್ತಿ’ ಅಡ್ಡವಾಗಿ ಕೂತಿದೆಯಾ?
ದೇವೇಗೌಡರು ಕೇಳಿದ್ದು ನೈಸ್ ಯೋಜನೆಯನ್ನು ಸರಕಾರದ ವಶಕ್ಕೆ ಪಡೆಯಿರಿ ಎಂದು. ಅವರು ಅದನ್ನೇ ಆಗ್ರಹಿಸಿ ಪತ್ರ ಬರೆದಿದ್ದರು. ನೀವು ಆ ಪಾಯಂಟಿಗೇ ಬರುತ್ತಿಲ್ಲ. ಸತ್ಯದ ಸೊಲ್ಲೆತ್ತದೆ ಸೈಲಂಟಾಗಿ ನೈಸ್ ಅನ್ನು ಪಕ್ಕಕ್ಕೆ ಸರಿಸುತ್ತಿದ್ದೀರಿ. ಯಾಕೆ? ಹೇಳಿಬಿಡಿ ಕಾರಣ ಎಂದಿರುವ ಜೆಡಿಎಸ್; ನೈಸ್ ಯೋಜನೆ ಸರಕಾರದ ವಶಕ್ಕೆ ಪಡೆಯುವುದು ನಿಮಗೆ ಇಷ್ಟ ಇಲ್ಲದಿದ್ದರೆ ಹೇಳಿ? ಆ ಕಳಂಕ, ಆ ಕಪ್ಪುಚುಕ್ಕೆ ಹೊತ್ತುಕೊಂಡೇ ರಾಜಕೀಯ ಅಂತ್ಯ ಕಾಣಬೇಕೆ? ನಿಮ್ಮ ಹಣೆಯಲ್ಲಿ ಹಾಗೆಯೇ ಬರೆದಿದ್ದರೆ ಯಾರು ಏನು ಮಾಡಿಯಾರು? ಅಲ್ಲಿಯೂ ಯಾವುದಾದರೂ ‘ಅತೀಂದ್ರ ಶಕ್ತಿ’ ಅಡಗಿ ಕೂತಿದೆಯಾ? ನಿಮ್ಮ ಮೌನ ಆ ಅನುಮಾನಕ್ಕೆ ಕಾರಣ. ದಯಮಾಡಿ ಮಾತನಾಡಿ ಎಂದು ಒತ್ತಾಯ ಮಾಡಿದೆ.
Politics
ಮೋದಿ, ಅಮಿತ್ ಶಾ ಸೇಡಿನ ರಾಜಕಾರಣಕ್ಕೆ ರಾಹುಲ್ ವಿರುದ್ಧ ದೂರು ದಾಖಲಿಸಲಾಗಿದೆ: ಸಿದ್ದರಾಮಯ್ಯ

ಕಾಂಗ್ರೆಸ್ ಪಕ್ಷದ ಹಿರಿಯ ನಾಯಕಿ ಸೋನಿಯಾ ಗಾಂಧಿ ಮತ್ತು ಕೇಂದ್ರ ಸರ್ಕಾರದ ಪಾಲಿಗೆ ಸಿಂಹಸ್ವಪ್ನರಾಗಿರುವ ರಾಹುಲ್ ಗಾಂಧಿಯವರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿರುವ ಜಾರಿ ನಿರ್ದೇಶನಾಲಯದ (ಇಡಿ) ಕ್ರಮ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ಸೇಡಿನ ರಾಜಕಾರಣದ ಮುಂದುವರಿದ ಭಾಗವಾಗಿದೆ.
ಇದು ಕೇವಲ ನಮ್ಮ ಪಕ್ಷದ ಇಬ್ಬರು ನಾಯಕರ ಇಲ್ಲವೇ ಕಾಂಗ್ರೆಸ್ ಪಕ್ಷದ ವಿರುದ್ಧದ ಸೇಡಿನ ಕ್ರಮ ಅಲ್ಲ, ಇದು ವಿರೋಧದ ದನಿಯನ್ನು ಸಹಿಸುವುದಿಲ್ಲ ಎಂಬ ಎಚ್ಚರಿಕೆಯನ್ನು ದೇಶದ ವಿರೋಧ ಪಕ್ಷಗಳು ಮತ್ತು ಪ್ರಜಾಪ್ರಭುತ್ವಪ್ರೇಮಿ ನಾಗರಿಕರಿಗೆ ನರೇಂದ್ರ ಮೋದಿ ಸರ್ಕಾರ ನೀಡಿರುವ ಎಚ್ಚರಿಕೆಯಾಗಿದೆ. ದ್ವೇಷದ ರಾಜಕಾರಣವನ್ನು ಎದುರಿಸುತ್ತಲೇ ಬಂದಿರುವ ಕಾಂಗ್ರೆಸ್ ಪಕ್ಷ ಇದನ್ನು ಕೂಡಾ ಸತ್ಯ ಮತ್ತು ನ್ಯಾಯದ ಬಲದಿಂದ ಎದುರಿಸಲಿದೆ.
ಸ್ವಾಯತ್ತ ತನಿಖಾ ಸಂಸ್ಥೆಯಾದ ಇಡಿಯನ್ನು ವಿರೋಧ ಪಕ್ಷದ ನಾಯಕರ ವಿರುದ್ಧ ದ್ವೇಷ ಸಾಧಿಸಲು ಆಯುಧವನ್ನಾಗಿ ಬಳಸುತ್ತಾ ಬಂದಿರುವ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಈಗ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಹಣ ಅಕ್ರಮ ವರ್ಗಾವಣೆಯಾಗಿರುವ ಸುಳ್ಳು ಆರೋಪವನ್ನು ಬಳಸಿಕೊಂಡಿದೆ. ಇದು ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ಆದೇಶದಂತೆಯೇ ಈ ದ್ವೇಷದ ರಾಜಕಾರಣ ನಡೆಯುತ್ತಿದೆ ಎನ್ನುವುದು ಸ್ಪಷ್ಟವಾಗಿದೆ.
ವಿಚಾರಣೆಯ ನೆಪದಲ್ಲಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಯವರು ಸೇರಿದಂತೆ ನಮ್ಮ ಪಕ್ಷದ ಪ್ರಮುಖ ನಾಯಕರಿಗೆ ನಿರಂತರವಾಗಿ ಮಾನಸಿಕ ಕಿರುಕುಳ ನೀಡಿ ಪೀಡಿಸಿದ ಇ.ಡಿ ಯು ಅದರಿಂದ ಯಾವುದೇ ಫಲ ಸಿಗದೆ ಇದ್ದಾಗ ಕಲ್ಪಿತ ಕತೆಗಳನ್ನು ಕಟ್ಟಿ ಆರೋಪ ಪಟ್ಟಿ ಸಲ್ಲಿಸಿದೆ.
ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಸರ್ವಾಧಿಕಾರಿ ಧೋರಣೆಯ ವಿರುದ್ದ ಕಾಂಗ್ರೆಸ್ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತನೂ ಬೀದಿಗೆ ಇಳಿದು ಇದನ್ನು ಪ್ರತಿಭಟಿಸಲಿದ್ದಾರೆ. ಈ ಪ್ರತಿರೋಧಕ್ಕೆ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಇಟ್ಟಿರುವ ಪ್ರತಿಯೊಬ್ಬ ಪ್ರಜೆಯೂ ಕೈಜೋಡಿಸಬೇಕಾಗಿದೆ.
Politics
ನೆಲ – ಜಲ – ಭಾಷೆ ವಿಚಾರದಲ್ಲಿ ನಾನು ಕನ್ನಡಿಗ, ರಾಜಕಾರಣಿ ಅಲ್ಲ: ಸಿದ್ದರಾಮಯ್ಯ

ನೀರಾವರಿ ವಿಚಾರದಲ್ಲಿ ರಾಜ್ಯಕ್ಕೆ ಆಗಿರುವ ಅನ್ಯಾಯದ ವಿರುದ್ಧ ಪಕ್ಷಾತೀತವಾಗಿ ಹೋರಾಡಲು ಸಿದ್ಧ ಎಂಬ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಹೇಳಿಕೆಯನ್ನು ನಾನು ಸಂಪೂರ್ಣ ಸ್ವಾಗತಿಸುತ್ತೇನೆ. ವೈಯಕ್ತಿಕವಾಗಿ ಇದು ನನ್ನ ಅಭಿಪ್ರಾಯವಾಗಿದ್ದು, ನೆಲ-ಜಲ-ಭಾಷೆ ವಿಚಾರದಲ್ಲಿ ನಾನು ಸದಾ ಕನ್ನಡಿಗನಾಗಿ ನಡೆದುಕೊಂಡಿದ್ದೇನೆಯೇ ಹೊರತು ರಾಜಕಾರಣಿಯಾಗಿ ಅಲ್ಲ ಎನ್ನುವುದನ್ನು ಹಿರಿಯರಾದ ದೇವೇಗೌಡರ ಗಮನಕ್ಕೆ ತರಬಯಸುತ್ತೇನೆ.
ಹತ್ತು ದಿನಗಳ ಅವಧಿಯಲ್ಲಿ 15,000 ಕ್ಯುಸೆಕ್ಸ್ ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸಬೇಕೆಂದು 2016ರ ಸೆಪ್ಟೆಂಬರ್ ತಿಂಗಳಲ್ಲಿ ಸುಪ್ರೀಂ ಕೋರ್ಟ್ ಆದೇಶ ನೀಡಿದಾಗ ಉದ್ಭವವಾದ ಬಿಕ್ಕಟ್ಟಿನ ಸಂದರ್ಭದಲ್ಲಿ ಮುಖ್ಯಮಂತ್ರಿಯಾಗಿದ್ದ ನಾನು ನಿಮ್ಮ ಮನೆಗೆ ಬಂದು ಕೈಹಿಡಿದು ಕರೆದುಕೊಂಡು ಬಂದು ಸರ್ವಪಕ್ಷಗಳ ಸಭೆ ನಡೆಸಿದ್ದು ನಿಮಗೆ ನೆನಪಿರಬಹುದೆಂದು ಭಾವಿಸಿದ್ದೇನೆ.
ಹಿಂದೆಲ್ಲ ರಾಜ್ಯದ ಹಿತಾಸಕ್ತಿಯ ರಕ್ಷಣೆಯ ಪ್ರಶ್ನೆ ಎದುರಾದಾಗ ಒಬ್ಬ ಮುತ್ಸದ್ದಿಯಾಗಿ ಇದಕ್ಕಿಂತಲೂ ಮುಖ್ಯವಾಗಿ ಒಬ್ಬ ಹೆಮ್ಮೆಯ ಕನ್ನಡಿಗನಾಗಿ ರಾಜ್ಯಕ್ಕೆ ನ್ಯಾಯ ಕೊಡಲು ನೀವು ಹೋರಾಟ ನಡೆಸಿದ್ದನ್ನು ರಾಜ್ಯದ ಜನರು ಗಮನಿಸಿದ್ದಾರೆ. ಆದರೆ ಇತ್ತೀಚೆಗೆ ನೀವು ಮತ್ತು ನಿಮ್ಮ ಪಕ್ಷ ಕೇಂದ್ರ ಸರ್ಕಾರದ ವಕ್ತಾರರಂತೆ ಪಕ್ಷಪಾತಿಯಾಗಿ ವರ್ತಿಸುತ್ತಿರುವುದನ್ನು ಕೂಡಾ ನನ್ನನ್ನೂ ಸೇರಿದಂತೆ ಏಳುಕೋಟಿ ಕನ್ನಡಿಗರು ಗಮನಿಸುತ್ತಿದ್ದಾರೆ. ಕೇಂದ್ರ ಸಂಪುಟದಲ್ಲಿ ಮಗನನ್ನು ಸಚಿವನನ್ನಾಗಿ ಮಾಡಲು ಗೌಡರು ಇಷ್ಟೊಂದು ರಾಜಿ ಮಾಡಿಕೊಳ್ಳುವ ಅಗತ್ಯ ಇತ್ತಾ? ಎಂದು ಜನ ಪ್ರಶ್ನಿಸುತ್ತಿದ್ದಾರೆ.
ನೀರಾವರಿ ವಿಚಾರದಲ್ಲಿ ನ್ಯಾಯಪಕ್ಷಪಾತಿಯಾಗಿ ಕರ್ನಾಟಕದ ಹಿತಾಸಕ್ತಿಯ ರಕ್ಷಣೆ ಮಾಡಬೇಕಾಗಿದ್ದ ಕೇಂದ್ರದ ನರೇಂದ್ರ ಮೋದಿ ಅವರ ನೇತೃತ್ವದ ಬಿಜೆಪಿ ಸರ್ಕಾರ ಸತತವಾಗಿ ಕನ್ನಡಿಗರ ಹಿತವನ್ನು ಬಲಿಗೊಡಲು ಹೊರಟಿರುವುದನ್ನು ಸನ್ಮಾನ್ಯ ದೇವೇಗೌಡರಿಗೆ ನಾನು ಬಿಡಿಸಿ ಹೇಳಬೇಕಾಗಿಲ್ಲ ಎಂದು ತಿಳಿದುಕೊಂಡಿದ್ದೇನೆ.
ಮಹದಾಯಿ ಜಲಾನಯನ ಪ್ರದೇಶದ ಕಳಸಾ ನಾಲೆ ಯೋಜನೆಯ ರೂ.995.30 ಕೋಟಿ ವೆಚ್ಚದ ವಿಸ್ತೃತ ಯೋಜನಾ ವರದಿ (ಡಿಪಿಆರ್ )ಗೆ 2023ರ ಮಾರ್ಚ್ ನಲ್ಲಿಯೇ ಅನುಮೋದನೆ ನೀಡಲಾಗಿದೆ. ಈ ಯೋಜನೆಗೆ ಅಗತ್ಯವಿರುವ ಭೂಮಿಯಲ್ಲಿ 26,925 ಹೆಕ್ಟೇರ್ ಅರಣ್ಯಪ್ರದೇಶದ ಸ್ವಾಧೀನ ಪ್ರಕ್ರಿಯೆ ಗೋವಾ ರಾಜ್ಯದ ಆಕ್ಷೇಪದ ಕಾರಣದಿಂದಾಗಿ ಕುಂಟುತ್ತಾ ಸಾಗಿದೆ. ಪ್ರಸ್ತುತ ಈ ಪ್ರಕ್ರಿಯೆ ರಾಷ್ಟ್ರೀಯ ವನ್ಯಜೀವಿ ಮಂಡಳಿ (ಎನ್ ಬಿಡಬ್ಯುಎಲ್ ) ಮತ್ತು ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ (ಎನ್ ಟಿಸಿಎ)ದ ಪರಿಶೀಲನೆಯಲ್ಲಿದೆ. ಈ ಯೋಜನೆಗೆ ಕೇಂದ್ರ ಸರ್ಕಾರದಿಂದ ರಾಜ್ಯ ಸರ್ಕಾರ ಅನುಮೋದನೆ ಪಡೆಯಬಹುದು ಎಂದು ಸುಪ್ರೀಂ ಕೋರ್ಟ್ ಸ್ಪಷ್ಟೀಕರಣ ನೀಡಿರುವ ಕಾರಣ ಶೀಘ್ರವಾಗಿ ಈ ಯೋಜನೆಗೆ ಕೇಂದ್ರ ಸರ್ಕಾರ ಅನುಮತಿ ನೀಡಬೇಕಾಗಿದೆ.
ಬಂಡೂರಿ ನಾಲೆ ತಿರುವು ಯೋಜನೆಗೆ ಅಗತ್ಯವಿರುವ 28 ಹೆಕ್ಟೇರ್ ಅರಣ‍್ಯ ಪ್ರದೇಶದ ಸ್ವಾಧೀನಕ್ಕಾಗಿ 2024ರ ಆಗಸ್ಟ್ ನಲ್ಲಿಯೇ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಈ ಬೇಡಿಕೆಗೆ ಸಂಬಂಧಿಸಿದ ಇತರ ಪ್ರಕ್ರಿಯೆಗಳನ್ನು ರಾಜ್ಯ ಸರ್ಕಾರ ಸಂಪೂರ್ಣಗೊಳಿಸಲಾಗಿದ್ದು ಈ ನದಿ ತಿರುವು ಯೋಜನೆಗೆ ಕೇಂದ್ರ ಸರ್ಕಾರ ಅನುಮತಿ ನೀಡುವುದಷ್ಟೇ ಬಾಕಿ ಉಳಿದಿದೆ.
ಕೃಷ್ಣಾ ಜಲವಿವಾದ ನ್ಯಾಯಮಂಡಳಿ ಕರ್ನಾಟಕಕ್ಕೆ 173 ಟಿಎಂಸಿ ನೀರಿನ ಪಾಲನ್ನು ನೀಡಿ 2010ರಲ್ಲಿಯೇ ಐತೀರ್ಪು ನೀಡಿದೆ. ಈ ನೀರಿನ ಪಾಲಿನಲ್ಲಿ 130 ಟಿಎಂಸಿಯನ್ನು ಬಳಸಿಕೊಂಡು ಉತ್ತರ ಕರ್ನಾಟಕದ ಏಳು ಜಿಲ್ಲೆಗಳಿಗೆ ನೀರುಣಿಸುವ ರೂ.51,148 ಸಾವಿರ ವೆಚ್ಚದ ಮೂರನೇ ಹಂತದ ಕೃಷ್ಣಾ ಮೇಲ್ದಂಡೆ ಯೋಜನೆ ಅನುಷ್ಠಾನಕ್ಕೆ ಸಿದ್ಧವಾಗಿದೆ. ಆದರೆ ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆಯಲ್ಲಿರುವ ಪ್ರತಿವಾದಿ ರಾಜ್ಯಗಳ ಆಕ್ಷೇಪಣಾ ಅರ್ಜಿಗಳನ್ನು ಉಲ್ಲೇಖಿಸಿ ಕೇಂದ್ರ ಸರ್ಕಾರ ನ್ಯಾಯಮಂಡಳಿಯ ಐತೀರ್ಪನ್ನು ಗೆಜೆಟ್ ನಲ್ಲಿ ಪ್ರಕಟಿಸಲು ನಿರಾಕರಿಸುತ್ತಾ ಬಂದಿದೆ. ಈ ಯೋಜನೆಯ ಅನಿವಾರ್ಯತೆಯನ್ನು ಸುಪ್ರೀಂಕೋರ್ಟ್ ಗೆ ಮನವರಿಕೆ ಮಾಡಿಕೊಟ್ಟು ಶೀಘ್ರವಾಗಿ ಐತೀರ್ಪನ್ನು ಗೆಜೆಟ್ ನಲ್ಲಿ ಪ್ರಕಟಿಸಿದರೆ ಈ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸಬೇಕೆಂಬ ಪ್ರಸ್ತಾವವನ್ನು ಸಲ್ಲಿಸಲು ಅನುಕೂಲವಾಗುತ್ತದೆ.
ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಣೆ ಮಾಡಿದರೆ ಚಿಕ್ಕಮಗಳೂರು, ಚಿತ್ರದುರ್ಗ, ತುಮಕೂರು ಮತ್ತು ದಾವಣಗೆರೆಯ ಬರಪೀಡಿತ ಪ್ರದೇಶಗಳಿಗೆ ವರದಾನವಾಗಲಿದೆ. ಈ ಘೋಷಣೆಯ ಪ್ರಸ್ತಾವಕ್ಕೆ ಸಾರ್ವಜನಿಕ ಹೂಡಿಕೆ ಸಮಿತಿ ಈಗಾಗಲೇ ಅಂಗೀಕಾರ ನೀಡಿದೆ. ಆದರೆ ಕೇಂದ್ರ ಸರ್ಕಾರ ಮೀನಮೇಷ ಎಣಿಸುತ್ತಾ ಕೂತಿದೆ.
ಬೆಂಗಳೂರು ನಗರಕ್ಕೆ ಕುಡಿಯುವ ನೀರಿನ ಪೂರೈಕೆ ಮತ್ತು 400 ಮೆಗಾವಾಟ್ ವಿದ್ಯುತ್ ಉತ್ಪಾದನೆಗಾಗಿಯೇ ಮೇಕೆದಾಟು ಯೋಜನೆಯನ್ನು ರೂಪಿಸಲಾಗಿದೆ. ಈ ಯೋಜನೆಯ ವಿವರಗಳೆಲ್ಲ ನಿಮಗೆ ಬಾಯಿಪಾಠದಲ್ಲಿರಬಹುದು. ಈ ಯೋಜನೆಗೆ ಕೇಂದ್ರ ಸರ್ಕಾರದಿಂದ ಅನುಮತಿ ದೊರಕಿಸಿಕೊಟ್ಟರೆ ಬೆಂಗಳೂರು ನಿವಾಸಿಗಳು ಸದಾ ನಿಮಗೆ ಋಣಿಯಾಗಿರುತ್ತಾರೆ.
ಕೃಷ್ಣಾ ಮತ್ತು ಕಾವೇರಿ ನದಿಗಳ ಜೋಡಣೆಯ ನೀರಾವರಿ ಯೋಜನೆಯ ಬಗ್ಗೆ ನಿಮ್ಮ ಕಳಕಳಿಗೆ ನಮ್ಮ ಸಂಪೂರ್ಣ ಸಹಕಾರ ಇದೆ. ಈ ವಿಷಯದಲ್ಲಿ ನೀವು ನಡೆಸುವ ಹೋರಾಟಕ್ಕೆ ನಾನು ಮತ್ತು ಡಿ.ಕೆ.ಶಿವಕುಮಾರ್ ಮಾತ್ರವಲ್ಲ ಸಮಸ್ತ ಕರ್ನಾಟಕ ನಿಮ್ಮ ಜೊತೆ ಇರುತ್ತದೆ. ಆದರೆ ಹೊಸ ನೀರಾವರಿ ಯೋಜನೆಗಳನ್ನು ಪ್ರಾರಂಭಿಸುವ ಮೊದಲು ಅಪೂರ್ಣ ಸ್ಥಿತಿಯಲ್ಲಿರುವ ನೀರಾವರಿ ಯೋಜನೆಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ನಿಮ್ಮ ಸಹಕಾರ ಇರಲಿ ಎಂದು ಮನವಿ ಮಾಡಿಕೊಳ‍್ಳುತ್ತಿದ್ದೇನೆ.
ಕರ್ನಾಟಕ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯಗಳ ಸರಮಾಲೆಯನ್ನು ಸದ್ಯ ನೀರಾವರಿ ಕ್ಷೇತ್ರಕ್ಕಷ್ಟೇ ಸೀಮಿತಗೊಳಿಸುತ್ತಿದ್ದೇನೆ. ಇನ್ನು ತೆರಿಗೆ ಹಂಚಿಕೆ, ಪ್ರಕೃತಿ ವಿಕೋಪ ಪರಿಹಾರ, ಕುಡಿಯುವ ನೀರು ಪೂರೈಕೆ, ರೈಲ್ವೆ ಯೋಜನೆಗಳ ವಿಚಾರದಲ್ಲಿಯೂ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಕರ್ನಾಟಕವನ್ನು ಶತ್ರು ರಾಜ್ಯದಂತೆ ನಡೆಸಿಕೊಳ್ಳುತ್ತಿದೆ. ಈ ವಿಚಾರಗಳು ಕೂಡಾ ನಿಮಗೆ ಗೊತ್ತಿರುವುದರಿಂದ ಸಂಸತ್ ನಲ್ಲಿ ಈ ಬಗ್ಗೆ ನೀವು ದನಿ ಎತ್ತುತ್ತೀರಿ ಎಂದು ರಾಜ್ಯದ ಜನರು ನಿರೀಕ್ಷಿಸಿದ್ದರು.
ಕೇಂದ್ರದಲ್ಲಿ ಯಾವ ಪಕ್ಷದ ಸರ್ಕಾರ ಇದ್ದರೂ ನೀವು ಮುಲಾಜಿಗೆ ಬೀಳದೆ ಕರ್ನಾಟಕದ ಹಿತಾಸಕ್ತಿಯ ರಕ್ಷಣೆಯ ಪ್ರಶ್ನೆ ಎದುರಾದಾಗ ದನಿ ಎತ್ತುತ್ತಾ ಬಂದವರು. ಆ ಮುತ್ಸದ್ದಿ ದೇವೇಗೌಡರನ್ನು ಕಾಣಲು ಕನ್ನಡಿಗರು ಬಯಸುತ್ತಿದ್ದಾರೆ. ಆದರೆ ಈಗಿನ ದೇವೇಗೌಡರು ಬಿಜೆಪಿ ಮತ್ತು ನರೇಂದ್ರ ಮೋದಿಯವರ ಚಿಯರ್ ಲೀಡರ್ ರೀತಿ ವರ್ತಿಸುತ್ತಿದ್ದಾರೆ ಎಂದು ವಿಷಾದದಿಂದ ಹೇಳಬೇಕಾಗಿದೆ.
ದೈಹಿಕವಾಗಿ ನೀವು ಸ್ವಲ್ಪ ಕುಗ್ಗಿದಂತೆ ಕಂಡರೂ ಮಾನಸಿಕವಾಗಿ ನೀವಿನ್ನೂ ದೃಡವಾಗಿದ್ದೀರಿ. ದಯವಿಟ್ಟು ಈಗಲಾದರೂ ಪಕ್ಷ ರಾಜಕಾರಣವನ್ನು ಮೀರಿ ಒಬ್ಬ ಮುತ್ಸದ್ದಿ ನಾಯಕನ ರೀತಿಯಲ್ಲಿ ಕನ್ನಡ-ಕನ್ನಡಿಗ-ಕರ್ನಾಟಕದ ಹಿತರಕ್ಷಣೆಗೆ ಮುಂದಾಗಬೇಕೆಂದು ನಿಮ್ಮಲ್ಲಿ ಮನವಿ ಮಾಡಿಕೊಳ್ಳುತ್ತಿದ್ದೇನೆ. ಈ ನಿಟ್ಟಿನಲ್ಲಿ ನೀವು ಮಾಡುವ ಪ್ರಯತ್ನಕ್ಕೆ ನಮ್ಮ ಸರ್ಕಾರದ ಸಂಪೂರ್ಣ ಬೆಂಬಲ ಇದೆ. ಏಳು ಕೋಟಿ ಕನ್ನಡಿಗರೂ ನಿಮ್ಮ ಜೊತೆಯಲ್ಲಿ ಇರುತ್ತಾರೆ ಎಂಬ ಭರವಸೆಯೂ ನನಗಿದೆ.

ಬೆಂಗಳೂರು ಮೆಟ್ರೊ ರೈಲು ನಿಗಮ (ಬಿಎಂಆರ್‌ಸಿಎಲ್) ಇತ್ತೀಚೆಗೆ ಪರಿಷ್ಕರಿಸಿರುವ ಪ್ರಯಾಣ ದರ ಏರಿಕೆ ಹಲವು ರೀತಿಯ ವೈಪರೀತ್ಯಗಳಿಂದ ಕೂಡಿದ್ದು, ಕೆಲವು ಕಡೆಗಳಲ್ಲಿ ಪ್ರಯಾಣ ದರ ದುಪ್ಪಟ್ಟಾಗಿರುವುದನ್ನು ಗಮನಿಸಿದ್ದೇನೆ. ಇದರ ವಿರುದ್ಧ ವ್ಯಕ್ತವಾದ ಸಾರ್ವಜನಿಕರ ವಿರೋಧವನ್ನು ಪರಿಗಣಿಸಿ ಎಲ್ಲೆಲ್ಲಿ ಅಸಹಜ ರೀತಿಯಲ್ಲಿ ದರ ಏರಿಕೆಯಾಗಿದೆಯೋ ಅಂತಹ ಕಡೆಗಳಲ್ಲಿ ಪ್ರಯಾಣ ದರ ಇಳಿಸುವಂತೆ ಬಿಎಂಆರ್‌ಸಿಎಲ್ ವ್ಯವಸ್ಥಾಪಕ ನಿರ್ದೇಶಕರಿಗೆ ತಿಳಿಸಿದ್ದೇನೆ.
ಮೆಟ್ರೊ ರೈಲು ವ್ಯವಸ್ಥೆ ದೊಡ್ಡ ಪ್ರಮಾಣದಲ್ಲಿ ಬಂಡವಾಳ ಹೂಡಿಕೆ ಮಾಡಬೇಕಾಗಿರುವ ಸಾರ್ವಜನಿಕ ಸಾರಿಗೆ ವ್ಯವಸ್ಥೆಯಾಗಿರುವ ಕಾರಣ ಪ್ರಯಾಣ ದರ ಪರಿಷ್ಕರಣೆ ಅನಿವಾರ್ಯವಾಗಿತ್ತು ಎನ್ನುವುದು ನಿಜವಾದರೂ ಅಂತಿಮವಾಗಿ ಪ್ರಯಾಣಿಕರ ಹಿತರಕ್ಷಣೆ ಮಾಡಬೇಕಾಗಿರುವುದು ನಮ್ಮ ಕರ್ತವ್ಯ ಎನ್ನುವುದನ್ನು ಬಿಎಂಆರ್‌ಸಿಎಲ್ ಗಮನಕ್ಕೆ ತಂದಿದ್ದೇನೆ.
-
Chamarajanagar22 hours ago
ನಾಳೆ ವಿವಿಧೆಡೆ ವಿದ್ಯುತ್ ವ್ಯತ್ಯಯ
-
Mysore19 hours ago
12 ವರ್ಷದ ಬಾಲಕಿ ಮೇಲೆ ಅತ್ಯಾಚಾರ : ಆರೋಪಿ ಬಂಧನ
-
Hassan23 hours ago
ಬಗರ್ ಹುಕುಂ ಸಾಗುವಳಿ ಮಂಜೂರಾತಿಯ ಸಭೆ
-
Kodagu19 hours ago
ಹುಲಿ ದಾಳಿಗೆ ಕರು ಬಲಿ
-
Kodagu22 hours ago
ಬಿರುನಾಣಿ ವ್ಯಾಪ್ತಿಯಲ್ಲಿ ಹುಲಿ ಸೆರೆಗೆ ಕಾರ್ಯಚರಣೆ
-
Chikmagalur24 hours ago
ಅಪ್ರಾಪ್ತನಿಂದ ದ್ವಿಚಕ್ರ ವಾಹನ ಚಾಲನೆ: ಪೋಷಕರಿಗೆ 25 ಸಾವಿರ ರೂ ದಂಡ.
-
Hassan24 hours ago
ಜನಿವಾರ, ಕಾಶೀ ದಾರ ತೆಗೆಸಿರುವುದು ಖಂಡನೀಯ
-
Mysore21 hours ago
ಆರ್. ರಘು ಅವರ ಎರಡು ಕೃತಿಗಳ ಲೋಕಾರ್ಪಣೆ