ಕೇರಳದಲ್ಲಿ ಹಕ್ಕಿ ಜ್ವರ; ಕೊಡಗಿನಲ್ಲಿ ಹೈ ಅಲರ್ಟ್

ಕೇರಳದಲ್ಲಿ ಹಕ್ಕಿ ಜ್ವರ; ಕೊಡಗಿನಲ್ಲಿ ಹೈ ಅಲರ್ಟ್

ಮಡಿಕೇರಿ,: ಕೇರಳ ರಾಜ್ಯದ ಕೊಟ್ಟಾಯಂ ಮತ್ತು ಅಲಪ್ಪುಳ ಜಿಲ್ಲಾ ವ್ಯಾಪ್ತಿಯ ಬಾತುಕೋಳಿಗಳಲ್ಲಿ ಕೋಳಿ ಶೀತಜ್ವರ ಕಂಡುಬಂದಿದೆ. ಈ ಹಿನ್ನೆಲೆ ಕೊಡಗು ಜಿಲ್ಲೆಯಲ್ಲಿಯೂ ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಪಶುಪಾಲನಾ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಸೂಚಿಸಿದ್ದಾರೆ. ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿಗಳು, “ಹಕ್ಕಿಜ್ವರ ನಿಯಂತ್ರಣ ಸಂಬಂಧ ಸರ್ಕಾರದ ಮಾರ್ಗಸೂಚಿಯಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು” ಎಂದರು.

ಜಿಲ್ಲೆಯ ಕುಟ್ಟ, ಮಾಕುಟ್ಟ, ಕರಿಕೆ ಭಾಗದಲ್ಲಿ ಚೆಕ್ ಪೋಸ್ಟ್‌ಗಳನ್ನು ಸ್ಥಾಪಿಸಿ, ಕೇರಳ ರಾಜ್ಯದಿಂದ ಕೊಡಗು ಜಿಲ್ಲೆಗೆ ಆಗಮಿಸುವ ಕೋಳಿ ಹಾಗೂ ಕುಕ್ಕುಟ ಉತ್ಪನ್ನಗಳ ಸಾಗಾಣಿಕೆಯ ವಾಹನಗಳನ್ನು ಪರಿಶೀಲಿಸುವುದರ ಜೊತೆಗೆ, ಸಾಗಾಣಿಕೆ ವಾಹನಗಳನ್ನು ಸ್ಯಾನಿಟೈಸ್ ಮಾಡಿ ಜಿಲ್ಲೆಯ ಒಳಗೆ ಪ್ರವೇಶಿಸಲು ಅನುಮತಿ ನೀಡುವಂತೆ ನಿರ್ದೇಶನ ನೀಡಿದರು.

ಚೆಕ್ ಪೋಸ್ಟ್‌ ಸ್ಥಾಪನೆ ಮತ್ತು ಅಗತ್ಯ ಸಹಕಾರಕ್ಕೆ ಅರಣ್ಯ, ಪೊಲೀಸ್, ಸಾರಿಗೆ ಇಲಾಖೆ ಅಧಿಕಾರಿಗಳು ಸಹಕಾರ ನೀಡಲಿದ್ದು, ಈ ಸಂಬಂಧ ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸುವಂತೆ ಪಶುಪಾಲನಾ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚಿಸಿದರು.

“ಹಕ್ಕಿಜ್ವರ ನಿಯಂತ್ರಣ ಸಂಬಂಧ ಜಿಲ್ಲಾಡಳಿತ ಸರ್ಕಾರದ ಮಾರ್ಗಸೂಚಿಯಂತೆ ಗಡಿಭಾಗದಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದು, ಸಾರ್ವಜನಿಕರು ಯಾವುದೇ ರೀತಿಯ ವದಂತಿಗಳಿಗೆ ಕಿವಿಗೊಡಬಾರದು” ಎಂದು ಅನೀಸ್ ಕಣ್ಮಣಿ ಜಾಯ್ ಮನವಿ ಮಾಡಿದರು. ಪಶುಪಾಲನಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಚಿದಾನಂದ ಮಾತನಾಡಿ, “ಹಕ್ಕಿಜ್ವರವು ಪಕ್ಷಿಗಳು ಹಾಗೂ ಕೋಳಿ ಮತ್ತಿತರ ಮೂಲಕ ಹರಡುವ ಸಾಧ್ಯತೆ ಇದ್ದು, ಕೇರಳ ರಾಜ್ಯದಲ್ಲಿ ಕಂಡು ಬಂದಿರುವುದರಿಂದ ಕೇರಳ ರಾಜ್ಯದ ಗಡಿಭಾಗದಲ್ಲಿ ಅಗತ್ಯ ಮುನ್ನೆಚ್ಚರಿಕೆ ವಹಿಸಲಾಗಿದೆ. ಕೋಳಿ ಮತ್ತು ಪಕ್ಷಿಗಳ ರಕ್ತ ಹಾಗೂ ಇಕ್ಕೆ ಮಾದರಿಯಲ್ಲಿ ಪರೀಕ್ಷೆಗೆ ಒಳಪಡಿಸಲಾಗುತ್ತದೆ” ಎಂದರು.

ತಾಜಾ ಸುದ್ದಿಗಳು