Connect with us

Mandya

ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಒದಗಿಸುವುದೇ ಕಾನೂನು ಸೇವಾ ಪ್ರಾಧಿಕಾರದ ಉದ್ದೇಶ : ನ್ಯಾ.ಆನಂದ್ ಎಂ.

Published

on

ಮಂಡ್ಯ: ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಯಾವುದೇ ಆರ್ಥಿಕ ಅಡಚಣೆಯಿಲ್ಲದೆ ನ್ಯಾಯ ದೊರಕಿಸಿಕೊಡುವುದು ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ಪ್ರಮುಖ ಉದ್ದೇಶವಾಗಿದೆ. ಬಡತನ, ಆರ್ಥಿಕ ಹಿಂದುಳಿತ ಅಥವಾ ಅಸಹಾಯಕತೆಯ ಕಾರಣದಿಂದ ಯಾರೂ ನ್ಯಾಯ ಪಡೆಯುವ ಹಕ್ಕಿನಿಂದ ವಂಚಿತರಾಗಬಾರದು ಎಂಬ ಆಶಯದೊಂದಿಗೆ ಕಾನೂನು ಸೇವೆಗಳ ಕಾಯ್ದೆಯನ್ನು ಜಾರಿಗೆ ತರಲಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಆನಂದ್ ಎಂ. ತಿಳಿಸಿದರು.

ನಗರದ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನ ಕಲ್ಲು ಕಟ್ಟಡದಲ್ಲಿ ಜಿಲ್ಲಾ ನ್ಯಾಯಾಂಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ ವಿಭಾಗ), ವಕೀಲರ ಸಂಘ, ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜು ಹಾಗೂ ಅನನ್ಯ ಹಾರ್ಟ್ಸ್ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಕಾನೂನು ಸೇವೆಗಳ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ರಾಷ್ಟ್ರೀಯ ಕಾನೂನು ಸೇವೆಗಳ ಕಾಯ್ದೆ-1987ರ ಸ್ಮರಣಾರ್ಥ ಪ್ರತಿವರ್ಷ ನವೆಂಬರ್ 9ರಂದು ರಾಷ್ಟ್ರೀಯ ಕಾನೂನು ಸೇವೆಗಳ ದಿನ ಆಚರಿಸಲಾಗುತ್ತದೆ. ಈ ದಿನದ ಮಹತ್ವದ ಕುರಿತು ವಿದ್ಯಾರ್ಥಿಗಳು ಅರಿವು ಹೊಂದುವುದರ ಜತೆಗೆ ಸಾರ್ವಜನಿಕರಿಗೆ ಲಭ್ಯವಿರುವ ಉಚಿತ ಕಾನೂನು ನೆರವಿನ ಸೌಲಭ್ಯಗಳ ಬಗ್ಗೆ ತಿಳಿದುಕೊಳ್ಳಬೇಕು ಎಂದರು.

ಭಾರತೀಯ ಸಂವಿಧಾನವು ಪ್ರತಿಯೊಬ್ಬರಿಗೂ ಸಮಾನ ಅವಕಾಶ, ಸಮಾನ ಹಕ್ಕು ಹಾಗೂ ನ್ಯಾಯ ಒದಗಿಸುವ ಆಶಯ ಹೊಂದಿದೆ. ನ್ಯಾಯವು ಕೇವಲ ಆರ್ಥಿಕವಾಗಿ ಸಬಲರಾದವರಿಗೆ ಸೀಮಿತವಾಗದೆ ಸಮಾಜದ ಪ್ರತಿಯೊಬ್ಬರಿಗೂ ದೊರೆಯಬೇಕು. ಹಣಕಾಸಿನ ತೊಂದರೆಯಿಂದ ನ್ಯಾಯಾಲಯದ ಮೆಟ್ಟಿಲೇರಲು ಹಿಂಜರಿಯುವ ಪರಿಸ್ಥಿತಿ ಇರಬಾರದು. ಈ ಉದ್ದೇಶದಿಂದ ಅರ್ಹರಿಗೆ ಉಚಿತ ಕಾನೂನು ನೆರವು ಒದಗಿಸಲಾಗುತ್ತಿದೆ ಎಂದು ಹೇಳಿದರು.

ಕಾನೂನು ಸೇವೆಗಳ ಕಾಯ್ದೆಯ ಸೆಕ್ಷನ್ 12ರ ಅನ್ವಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು, ಮಹಿಳೆಯರು, ಮಕ್ಕಳು, ಹಿರಿಯ ನಾಗರಿಕರು ಸೇರಿದಂತೆ ಕಾಯ್ದೆಯಲ್ಲಿ ಗುರುತಿಸಿರುವ ಅರ್ಹ ವರ್ಗದವರಿಗೆ ಹಾಗೂ ನಿಗದಿತ ಆದಾಯ ಮಿತಿಯೊಳಗಿನವರಿಗೆ ಉಚಿತ ಕಾನೂನು ನೆರವು ಲಭ್ಯವಿದೆ. ಕಾನೂನು ಸಲಹೆ ನೀಡುವುದರಿಂದ ಹಿಡಿದು ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸುವುದು, ವಾದ ಮಂಡಿಸುವುದು ಸೇರಿದಂತೆ ಅಗತ್ಯ ಕಾನೂನು ಪ್ರಕ್ರಿಯೆಗಳಿಗೆ ವಕೀಲರನ್ನು ನೇಮಿಸಲಾಗುತ್ತದೆ. ಅರ್ಹ ಪ್ರಕರಣಗಳಲ್ಲಿ ನ್ಯಾಯಾಲಯದ ಶುಲ್ಕದಿಂದಲೂ ವಿನಾಯಿತಿ ದೊರೆಯಲಿದೆ ಎಂದು ವಿವರಿಸಿದರು.

ನ್ಯಾಯಾಲಯಗಳಲ್ಲಿ ಪ್ರಕರಣಗಳು ದೀರ್ಘಕಾಲ ಬಾಕಿ ಉಳಿಯುವುದನ್ನು ತಪ್ಪಿಸಿ, ತ್ವರಿತ ಹಾಗೂ ಸೌಹಾರ್ದಯುತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಲೋಕ ಅದಾಲತ್ ಮತ್ತು ಮಧ್ಯಸ್ಥಿಕೆ ಸೇರಿದಂತೆ ಪರ್ಯಾಯ ವಿವಾದ ಇತ್ಯರ್ಥ ವ್ಯವಸ್ಥೆಗಳನ್ನು ಜಾರಿಗೊಳಿಸಲಾಗಿದೆ. ರಾಷ್ಟ್ರೀಯ, ರಾಜ್ಯ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಕಾನೂನು ಸೇವಾ ಪ್ರಾಧಿಕಾರ ಮತ್ತು ಸಮಿತಿಗಳು ಕಾರ್ಯನಿರ್ವಹಿಸುತ್ತಿದ್ದು, ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ಗಳಲ್ಲಿಯೂ ಅರ್ಹರಿಗೆ ಉಚಿತ ಕಾನೂನು ನೆರವು ಲಭ್ಯವಿದೆ ಎಂದರು.

ವಿದ್ಯಾರ್ಥಿಗಳು ಕಾನೂನು ಸೇವಾ ಪ್ರಾಧಿಕಾರದ ಕಾರ್ಯಚಟುವಟಿಕೆಗಳ ಬಗ್ಗೆ ತಿಳಿದುಕೊಳ್ಳುವುದರ ಜತೆಗೆ ತಮ್ಮ ಕುಟುಂಬದವರು, ಸ್ನೇಹಿತರು ಹಾಗೂ ಸುತ್ತಮುತ್ತಲಿನ ಜನರಿಗೆ ಈ ಸೌಲಭ್ಯದ ಕುರಿತು ಮಾಹಿತಿ ನೀಡಬೇಕು. ನ್ಯಾಯಾಲಯದ ವೆಚ್ಚ ಭರಿಸಲು ಸಾಧ್ಯವಾಗದ ಅರ್ಹರು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಥವಾ ತಾಲ್ಲೂಕು ಕಾನೂನು ಸೇವಾ ಸಮಿತಿಯನ್ನು ಸಂಪರ್ಕಿಸಿ ಉಚಿತ ಕಾನೂನು ನೆರವು ಪಡೆಯಬಹುದು. ಕಾನೂನು ಅರಿವು ಮತ್ತು ಜಾಗೃತಿಯನ್ನು ಸಮಾಜದ ಪ್ರತಿಯೊಬ್ಬರಿಗೂ ತಲುಪಿಸುವ ಮೂಲಕ ಸಂವಿಧಾನದ ಸಮಾನ ನ್ಯಾಯದ ಆಶಯ ಸಾಕಾರಗೊಳಿಸಬೇಕು ಎಂದು ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಪ್ರಸನ್ನ ಕುಮಾರ್, ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ತಮ್ಮೆಗೌಡ ಹಾಗೂ ಜಿಲ್ಲಾ ವಕೀಲರ ಸಂಘದ ಉಪಾಧ್ಯಕ್ಷ ಎಸ್. ದೇವರಾಜು ಸೇರಿದಂತೆ ಇತರರು ಉಪಸ್ಥಿತರಿದ್ದರು.

Continue Reading

Mandya

ಕ್ರೀಡೆ ಬಾಂಧವ್ಯವನ್ನ ಬೆಸೆಯುತ್ತದೆ: ಬಿಇಓ ಧನಂಜಯ.

Published

on

ಮದ್ದೂರು: ಕ್ರೀಡೆಗಳು ದೈಹಿಕ, ಮಾನಸಿಕ ಸದೃಢತೆಯೊಂದಿಗೆ ಬಾಂಧವ್ಯ ಬೆಸೆಯುವ ಸಂಕೇತವಾಗಿದೆ ಎಂದು ಬಿಇಒ ಎಸ್.ಬಿ.ಧನಂಜಯ ತಿಳಿಸಿದರು.
ತಾಲೂಕಿನ ಸೋಮನಹಳ್ಳಿಯ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಆವರಣದಲ್ಲಿ ಮೇರಾ ಯುವ ಭಾರತ್ ಮಂಡ್ಯ, ಸ್ವಾಮಿ ವಿವೇಕಾನಂದ ಯುವ ಸಾಂಸ್ಕೃತಿಕ ಮತ್ತು ಕ್ರೀಡಾ ಸಂಘ, ಜಾನಪದ ಪರಿಷತ್ತು ಮದ್ದೂರು, ಯುವ ಪರಿಷತ್ತು ಮದ್ದೂರು ವತಿಯಿಂದ ಶುಕ್ರವಾರ ಆಯೋಜನೆ ಮಾಡಿದ ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದರು.

ಯುವಜನರು ಹೆಚ್ಚು ಕ್ರೀಡೆಯಲ್ಲಿ ತೊಡಗಿಸಿಕೊಂಡು, ತರಬೇತಿ ಪಡೆದು ಕಠಿಣ ಪರಿಶ್ರಮಪಟ್ಟರೆ ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಬಹುದೆಂದು ಕಿವಿ ಮಾತು ಹೇಳಿದರು.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ನಿಕಟ ಪೂರ್ವ ಅಧ್ಯಕ್ಷ ವಿ.ಹರ್ಷ ಮಾತನಾಡಿ, ಸರ್ಕಾರದ ಹಲವು ಸಂಸ್ಥೆಗಳೊಂದಿಗೆ ಯುವಕ ಸಂಘಗಳು ಸೇರಿ ಹಲವಾರು ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಕೊಂಡಿರುವುದು ಮೆಚ್ಚುಗೆಯ ವಿಷಯವಾಗಿದ್ದು,

ಈ ನಿಟ್ಟಿನಲ್ಲಿ ಸ್ವಾಮಿ ವಿವೇಕಾನಂದ ಯುವ ಸಾಂಸ್ಕೃತಿಕ ಮತ್ತು ಕ್ರೀಡಾ ಸಂಘ ಮುಂಚೂಣಿಯಲ್ಲಿರುವ ಇರುವುದು ಹರ್ಷದಾಯಕವಾಗಿದೆ ಎಂದು ಹರ್ಷ ವ್ಯಕ್ತಪಡಿಸಿದರು.ಕ್ರೀಡೆಯಲ್ಲಿ ಸೋಲು ಗೆಲುವು ಮುಖ್ಯವಲ್ಲ ಭಾಗವಹಿಸುವು ಹಾಗೂ ಕ್ರೀಡಾ ಸ್ಪೂರ್ತಿ ಮೆರೆಯುವುದು ಮುಖ್ಯವೆಂದರು.ಕ್ರೀಡಾಕೂಟದಲ್ಲಿ ಯುವಕರಿಗೆ ವಾಲಿಬಾಲ್, ಯುವತಿಯರಿಗೆ ಹಗ್ಗ ಜಗ್ಗಾಟ, ವೈಯಕ್ತಿಕ ಸ್ಪರ್ಧೆಗಳಾದ 100 ಮೀಟರ್ ಓಟ ಕೂಸುಮರಿ ಓಟವನ್ನ ಯುವಕ ಯುವತಿಯರಿಗೆ ಪ್ರತ್ಯೇಕವಾಗಿ ಏರ್ಪಡಿಸಲಾಗಿತ್ತು. ಗೆದ್ದವರು ಬಹುಮಾನ ಪಡೆದರೆ, ಸೋತವರು ಕ್ರೀಡಾಸ್ಪೂರ್ತಿ ತೋರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಐಟಿಐ ಕಾಲೇಜಿನ ಪ್ರಭಾರ ಪ್ರಾಂಶುಪಾಲ ಶಿವಲಿಂಗಯ್ಯ ವಹಿಸಿದರು. ಐಟಿಐ ಕಾಲೇಜಿನ ಎನ್ಎಸ್ಎಸ್ ಅಧಿಕಾರಿ ಪ್ರತಾಪ್ ಚಂದ್ರ, ಕರ್ನಾಟಕ ಜಾನಪದ ಪರಿಷತ್ ಅಧ್ಯಕ್ಷ ಲಾರ ಪ್ರಸನ್ನ, ಸ್ವಾಮಿ ಯುವ ಸಾಂಸ್ಕೃತಿಕ ಮತ್ತು ಕ್ರೀಡಾ ಸಂಘದ ಅಧ್ಯಕ್ಷ ಪಿ.ಕಿಶನ್ ಗೌಡ, ಎಸ್ಸಿಎಮ್ಎಂ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ರಮೇಶ್ ಸೇರಿದಂತೆ ಇತರರು ಹಾಜರಿದ್ದರು.

Continue Reading

Mandya

ಹಾಲಿನ ಪುಡಿ ಕಲಬೆರಕೆ ಪ್ರಕರಣ: ಎರಡನೇ ಆರೋಪಿ ಬಂಧನ

Published

on

ಮದ್ದೂರು: ಜಿಲ್ಲಾ ಹಾಲು ಒಕ್ಕೂಟದಲ್ಲಿ ನಡೆದಿರುವ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡನೇ ಆರೋಪಿಯಾಗಿರುವ ಹಾಲಿನ ಪುಡಿ ಘಟಕದ ಉಪವ್ಯವಸ್ಥಾಪಕ ಟಿ. ರಾಮಕೃಷ್ಣ ಅವರನ್ನು ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.

ನಗರದ ನ್ಯಾಯಾಲಯದ ಸಮೀಪ ರಾಮಕೃಷ್ಣ ಅವರನ್ನು ವಶಕ್ಕೆ ಪಡೆದ ಪೊಲೀಸರು, ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.


ಪ್ರಕರಣ ಬೆಳಕಿಗೆ ಬಂದ ಬಳಿಕ ಕಳೆದ ಮೂರು ತಿಂಗಳಿನಿಂದ ರಾಮಕೃಷ್ಣ ತಲೆಮರೆಸಿಕೊಂಡಿದ್ದರು ಎನ್ನಲಾಗಿದೆ. ಈ ಅವಧಿಯಲ್ಲಿ ಜಾಮೀನು ಪಡೆಯಲು ತೆರೆಮರೆಯಲ್ಲಿ ಪ್ರಯತ್ನ ನಡೆಸಿದ್ದರು. ಆದರೆ, ನ್ಯಾಯಾಲಯದಲ್ಲಿ ಅವರ ಜಾಮೀನು ಅರ್ಜಿ ತಿರಸ್ಕೃತಗೊಂಡಿತ್ತು ಎಂದು ತಿಳಿದುಬಂದಿದೆ.

ಹಾಲಿನ ಪುಡಿ ಕಲಬೆರಕೆ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿರುವ ರಾಮಕೃಷ್ಣ ಅವರ ಬಂಧನವು ಪ್ರಕರಣದ ತನಿಖೆಯಲ್ಲಿ ಮಹತ್ವದ ಬೆಳವಣಿಗೆಯಾಗಿದೆ.

Continue Reading

Mandya

ನವೆಂಬರ್ ಕೊನೆಯ ವಾರದಲ್ಲಿ ಎರಡು ದಿನಗಳ ಕಾಲ ಜಾಬ್ ಎಕ್ಸ್‌ಪ್ರೆಸ್ ಆಯೋಜನೆ : ಡಾ. ಕುಮಾರ

Published

on

ಮಂಡ್ಯ: ಜಿಲ್ಲೆಯ ಸ್ಥಳೀಯ ವಿದ್ಯಾರ್ಥಿಗಳು ಹಾಗೂ ನಿರುದ್ಯೋಗಿ ಯುವಕ-ಯುವತಿಯರಿಗೆ ಮೈಸೂರು, ಬೆಂಗಳೂರು ಸೇರಿದಂತೆ ವಿವಿಧ ನಗರಗಳ ಪ್ರತಿಷ್ಠಿತ ಕಂಪನಿಗಳಲ್ಲಿ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿಯೇ ಬೃಹತ್ ಉದ್ಯೋಗ ಮೇಳ ಆಯೋಜಿಸಲು ಅಗತ್ಯ ಸಿದ್ಧತೆ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ. ಕುಮಾರ ಅವರು ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ 1M1B ಫೌಂಡೇಶನ್, ಬೆಂಗಳೂರು ಸಂಸ್ಥೆಯ ಸಹಭಾಗಿತ್ವದಲ್ಲಿ ಜಿಲ್ಲೆಯಲ್ಲಿ ಉದ್ಯೋಗ ಮೇಳ (ಜಾಬ್ ಎಕ್ಸ್‌ಪ್ರೆಸ್) ಆಯೋಜಿಸುವ ಸಂಬಂಧ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.


ನವೆಂಬರ್ ತಿಂಗಳ ಕೊನೆಯ ವಾರದಲ್ಲಿ ಎರಡು ದಿನಗಳ ಕಾಲ ಉದ್ಯೋಗ ಮೇಳ ಆಯೋಜಿಸಲು ಉದ್ದೇಶಿಸಲಾಗಿದೆ. ಮೊದಲ ದಿನ ಉದ್ಯೋಗಾಕಾಂಕ್ಷಿಗಳಿಗೆ ವಿವಿಧ ಕಂಪನಿಗಳ ಪರಿಚಯ, ಉದ್ಯೋಗಾವಕಾಶಗಳು, ಅಗತ್ಯ ಕೌಶಲ್ಯಗಳು ಹಾಗೂ ಸಂದರ್ಶನ ಎದುರಿಸುವ ವಿಧಾನಗಳ ಕುರಿತು ಮಾಹಿತಿ ನೀಡುವ ಉದ್ದೇಶದಿಂದ ಓರಿಯಂಟೇಷನ್ ಕಾರ್ಯಕ್ರಮ ಹಮ್ಮಿಕೊಳ್ಳಬೇಕು. ಎರಡನೇ ದಿನ ವಿವಿಧ ಕಂಪನಿಗಳ ಪ್ರತಿನಿಧಿಗಳಿಂದ ಅಭ್ಯರ್ಥಿಗಳಿಗೆ ನೇರ ಸಂದರ್ಶನ ನಡೆಸಿ, ಅವರ ವಿದ್ಯಾರ್ಹತೆ ಮತ್ತು ಕೌಶಲ್ಯಕ್ಕೆ ಅನುಗುಣವಾಗಿ ಉದ್ಯೋಗ ಪಡೆಯಲು ಅವಕಾಶ ಕಲ್ಪಿಸಬೇಕು ಎಂದು ತಿಳಿಸಿದರು.

ಮೈಸೂರು, ಬೆಂಗಳೂರು ಸೇರಿದಂತೆ ಜಿಲ್ಲೆಯ ಸುತ್ತಮುತ್ತಲಿನ ಪ್ರದೇಶಗಳಲ್ಲಿರುವ ಪ್ರತಿಷ್ಠಿತ ಕಂಪನಿಗಳನ್ನು ಉದ್ಯೋಗ ಮೇಳಕ್ಕೆ ಆಹ್ವಾನಿಸಬೇಕು. ವಿವಿಧ ಕ್ಷೇತ್ರಗಳ ಕಂಪನಿಗಳು ಭಾಗವಹಿಸುವಂತೆ ಕ್ರಮ ವಹಿಸಿ, ಉದ್ಯೋಗಾಕಾಂಕ್ಷಿಗಳ ವಿದ್ಯಾರ್ಹತೆ, ಕೌಶಲ್ಯ ಮತ್ತು ಆಸಕ್ತಿಗೆ ಅನುಗುಣವಾಗಿ ಉದ್ಯೋಗಾವಕಾಶಗಳನ್ನು ಒದಗಿಸಬೇಕು. ಅಲ್ಲದೆ, ಭಾಗವಹಿಸುವ ಪ್ರತಿಯೊಂದು ಕಂಪನಿಯ ಹೆಸರು, ಉದ್ಯೋಗದ ಸ್ವರೂಪ, ವೇತನ ಶ್ರೇಣಿ ಹಾಗೂ ಉದ್ಯೋಗ ಸ್ಥಳದ ವಿವರಗಳನ್ನು ಮುಂಚಿತವಾಗಿ ಸಂಗ್ರಹಿಸಿ ಅಭ್ಯರ್ಥಿಗಳಿಗೆ ತಿಳಿಸಬೇಕು. ಇದರಿಂದ ಉದ್ಯೋಗಾಕಾಂಕ್ಷಿಗಳು ತಮಗೆ ಸೂಕ್ತವಾದ ಉದ್ಯೋಗವನ್ನು ಆಯ್ಕೆ ಮಾಡಿಕೊಳ್ಳಲು ಅನುಕೂಲವಾಗಲಿದೆ ಎಂದರು.

ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳ ಪ್ರಾಂಶುಪಾಲರು ಹಾಗೂ ಮುಖ್ಯಸ್ಥರು ತಮ್ಮ ಸಂಸ್ಥೆಗಳ ವಿದ್ಯಾರ್ಥಿಗಳು ಮತ್ತು ಉದ್ಯೋಗಾಕಾಂಕ್ಷಿಗಳಿಗೆ ಉದ್ಯೋಗ ಮೇಳದ ಕುರಿತು ವ್ಯಾಪಕ ಅರಿವು ಮೂಡಿಸಬೇಕು. ಉದ್ಯೋಗ ಮೇಳದ ಉದ್ದೇಶ, ನೋಂದಣಿ ಪ್ರಕ್ರಿಯೆ ಹಾಗೂ ಲಭ್ಯವಿರುವ ಉದ್ಯೋಗಾವಕಾಶಗಳ ಬಗ್ಗೆ ಮಾಹಿತಿ ನೀಡಿ, ಹೆಚ್ಚಿನ ಸಂಖ್ಯೆಯಲ್ಲಿ ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡು ಭಾಗವಹಿಸುವಂತೆ ಪ್ರೋತ್ಸಾಹಿಸಬೇಕು ಎಂದು ಸೂಚಿಸಿದರು.

ಜಿಲ್ಲೆಯ ಯುವಜನರಲ್ಲಿರುವ ಪ್ರತಿಭೆ, ಕೌಶಲ್ಯ ಮತ್ತು ವಿದ್ಯಾರ್ಹತೆಗೆ ಸೂಕ್ತ ವೇದಿಕೆ ಕಲ್ಪಿಸುವುದು ಉದ್ಯೋಗ ಮೇಳದ ಮುಖ್ಯ ಉದ್ದೇಶವಾಗಿದೆ. ಉದ್ಯೋಗಾಕಾಂಕ್ಷಿಗಳು ಮತ್ತು ಉದ್ಯೋಗದಾತ ಕಂಪನಿಗಳ ನಡುವೆ ನೇರ ಸಂಪರ್ಕ ಕಲ್ಪಿಸುವ ಮೂಲಕ ಸ್ಥಳೀಯ ಯುವಜನರಿಗೆ ಉದ್ಯೋಗ ದೊರಕಿಸಿಕೊಡಲು ಸಂಬಂಧಪಟ್ಟ ಇಲಾಖೆಗಳು ಹಾಗೂ ಸಂಸ್ಥೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಉದ್ಯೋಗ ಮೇಳದಲ್ಲಿ ಹೆಚ್ಚಿನ ಸಂಖ್ಯೆಯ ಪ್ರತಿಷ್ಠಿತ ಕಂಪನಿಗಳು ಹಾಗೂ ಅರ್ಹ ಅಭ್ಯರ್ಥಿಗಳು ಭಾಗವಹಿಸುವಂತೆ ಅಗತ್ಯ ಪ್ರಚಾರ ಮತ್ತು ವ್ಯವಸ್ಥೆಗಳನ್ನು ಕೈಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಅವರು ತಿಳಿಸಿದರು.

ಸಭೆಯಲ್ಲಿ ಉಪ ವಿಭಾಗ ಅಧಿಕಾರಿ ಶಿವಮೂರ್ತಿ,ನಗರಾಭಿವೃದ್ಧಿ ಕೋಶದ ಯೋಜನಾಧಿಕಾರಿ ಚಂದ್ರಶೇಖರ್, ಕೌಶಲ್ಯ ಅಭಿವೃದ್ಧಿ ಅಧಿಕಾರಿ ದಿವ್ಯ, ಸಹಾಯಕ ಯೋಜನಾ ಅಧಿಕಾರಿ ಹರ್ಷ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Continue Reading

Trending

error: Content is protected !!