Connect with us

Kodagu

ವಿದ್ಯಾರ್ಥಿಗಳು ಮೌಲ್ಯಾಧಾರಿತ ಶಿಕ್ಷಣದೊಂದಿಗೆ ಕೌಶಲ್ಯ ಬೆಳೆಸಿಕೊಳ್ಳಬೇಕು: ಬಸವರಾಜ ಹೊರಟ್ಟಿ ಅಭಿಮತ

Published

on

ಕುಶಾಲನಗರ:  ಉನ್ನತ ಶಿಕ್ಷಣದ ಜೊತೆಗೆ ವಿದ್ಯಾರ್ಥಿಗಳು ಮೌಲ್ಯಗಳು, ಕೌಶಲ ಮತ್ತು ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸಿಕೊಂಡಾಗ ಮಾತ್ರ ಉತ್ತಮ ನಾಗರಿಕರಾಗಲು ಸಾಧ್ಯ ಎಂದು ಕರ್ನಾಟಕ ವಿಧಾನ ಪರಿಷತ್ ಅಧ್ಯಕ್ಷ ಬಸವರಾಜ ಹೊರಟ್ಟಿ ಅಭಿಮತ ವ್ಯಕ್ತಪಡಿಸಿದರು.

ಕೊಡಗು ವಿಶ್ವವಿದ್ಯಾಲಯದ ಚಿಕ್ಕಅಳುವಾರದ ಜ್ಞಾನ ಕಾವೇರಿ ಆವರಣದಲ್ಲಿ ಮಂಗಳವಾರ ವಿದ್ಯಾರ್ಥಿಗಳನ್ನು ಉದ್ದೇಶಿಸಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಶಿಕ್ಷಣವು ಕೇವಲ ಪದವಿ ಪಡೆಯುವುದಕ್ಕಷ್ಟೇ ಸೀಮಿತವಾಗಬಾರದು. ಅದು ವ್ಯಕ್ತಿತ್ವ ವಿಕಸನ, ಸಮಾಜಮುಖಿ ಚಿಂತನೆ ಹಾಗೂ ರಾಷ್ಟ್ರ ನಿರ್ಮಾಣಕ್ಕೆ ಪೂರಕವಾಗಬೇಕು. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ನಿರಂತರ ಅಧ್ಯಯನದ ಜೊತೆಗೆ ಕೌಶಲಾಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಸಲಹೆ ನೀಡಿದರು.

ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಶಿಕ್ಷಣವಂತ ಮಹಿಳೆಯರಿಂದ ಕುಟುಂಬ ಮತ್ತು ಸಮಾಜ ಸದೃಢವಾಗುತ್ತದೆ. ಇಂದಿನ ಹೆಣ್ಣು ಮಕ್ಕಳು ಎಲ್ಲ ಕ್ಷೇತ್ರಗಳಲ್ಲೂ ಸಾಧನೆ ಮಾಡುತ್ತಿದ್ದು, ಅವರಿಗೆ ಆತ್ಮವಿಶ್ವಾಸ, ನಾಯಕತ್ವದ ಗುಣ ಹಾಗೂ ಕೌಶಲಗಳನ್ನು ಬೆಳೆಸಲು ಶಿಕ್ಷಣ ಸಂಸ್ಥೆಗಳು ಪೂರಕ ವಾತಾವರಣ ನಿರ್ಮಿಸಬೇಕು. ಪಾಲಕರು ಹೆಣ್ಣು-ಗಂಡು ಎಂಬ ಭೇದಭಾವವಿಲ್ಲದೆ ಸಮಾನ ಅವಕಾಶಗಳನ್ನು ಕಲ್ಪಿಸಬೇಕು ಎಂದು ಅವರು ಹೇಳಿದರು.

ಕೊಡಗು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಅಶೋಕ ಸಂಗಪ್ಪ ಆಲೂರು ಅಧ್ಯಕ್ಷತೆ ವಹಿಸಿ ಮಾತನಾಡಿ, ವಿಶ್ವವಿದ್ಯಾಲಯದಲ್ಲಿ ಗುಣಮಟ್ಟದ ಶಿಕ್ಷಣದ ಜೊತೆಗೆ ವಿದ್ಯಾರ್ಥಿಗಳ ಸಮಗ್ರ ವ್ಯಕ್ತಿತ್ವ ವಿಕಸನಕ್ಕೆ ಆದ್ಯತೆ ನೀಡಲಾಗುತ್ತಿದೆ. ರಾಜ್ಯದ ಹಿರಿಯ ಶಿಕ್ಷಣ ತಜ್ಞ ಹಾಗೂ ವಿಧಾನ ಪರಿಷತ್ ಅಧ್ಯಕ್ಷರಾದ ಬಸವರಾಜ ಹೊರಟ್ಟಿಯವರ ಮಾರ್ಗದರ್ಶನ ವಿದ್ಯಾರ್ಥಿಗಳಿಗೆ ಸ್ಫೂರ್ತಿದಾಯಕವಾಗಿದೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ವಿಶ್ವಸಂಸ್ಥೆಯ ಪರಿಸರ ಸಂರಕ್ಷಣೆಯ ಯೋಜನೆಯ ಅಡಿಯಲ್ಲಿ ಬೈಫ್ ಸಂಸ್ಥೆಯು ರೈನ್ ಫಾರೆಸ್ಟ್ ಅಲೈಯನ್ಸ್ ಅವರ ಸಹಯೋಗದಲ್ಲಿ ಸಬಲ ಎಂಬ ವಿಶಿಷ್ಟ ಕಾರ್ಯಕ್ರಮದ ಮೂಲಕ ಕೊಡಗು ವಿಶ್ವವಿದ್ಯಾಲಯದ ಚಿಕ್ಕಾಳುವಾರದ ಜ್ಞಾನ ಕಾವೇರಿ ಆವರಣದಲ್ಲಿ 1,325 ಸಸಿಗಳನ್ನು ನೆಟ್ಟು ಸಂರಕ್ಷಿಸುವ ಕಾರ್ಯಕ್ರಮಕ್ಕೆ ಬಸವರಾಜ ಹೊರಟ್ಟಿಯವರು ಚಾಲನೆ ನೀಡಿದರು.

ಈ ಕಾರ್ಯಕ್ರಮದಲ್ಲಿ ಅಂತಾರಾಷ್ಟ್ರೀಯ ಹಿಂದುಸ್ತಾನಿ ಗಾಯಕ ಡಾ.ಮೃತ್ಯುಂಜಯ ಶೆಟ್ಟರ ಅವರು ವಚನ ಗಾಯನ ನಡೆಸಿಕೊಟ್ಟರು.

ಕಾರ್ಯಕ್ರಮದಲ್ಲಿ ತಾಲೂಕು ದಂಡಾಧಿಕಾರಿ ಕೃಷ್ಣಮೂರ್ತಿ, ಗ್ರಾಮಾಂತರ ಪೊಲೀಸ್ ಠಾಣೆ ಕುಶಾಲನಗರ ಆರಕ್ಷಕ ಉಪನಿರೀಕ್ಷಕರು ರಾಮಚಂದ್ರ ಮತ್ತು ಸಿಬ್ಬಂದಿ, ವಿಶ್ವವಿದ್ಯಾಲಯದ ಅಧಿಕಾರಿಗಳು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ, ಸ್ನಾತಕ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಕನ್ನಡ ವಿಭಾಗದ ಉಪನ್ಯಾಸಕ ಡಾ ಜಮೀರ್ ಅಹಮದ್ ನಿರೂಪಿಸಿ, ವಂದಿಸಿದರು.

Continue Reading

Kodagu

ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

Published

on

ಮಡಿಕೇರಿ : ಕರ್ನಾಟಕ ಸರ್ಕಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಮಕ್ಕಳ ದಿನಾಚರಣೆ-2026ರ ಪ್ರಯುಕ್ತ ಮಕ್ಕಳು ತಮ್ಮ ಪ್ರಾಣದ ಹಂಗನ್ನು ತೊರೆದು ಹಾಗೂ ಸಮಯ ಪ್ರಜ್ಞೆಯಿಂದ ಇತರರ ಪ್ರಾಣದ ರಕ್ಷಣೆಗಾಗಿ ಧೈರ್ಯ-ಸಾಹಸ ಪ್ರದರ್ಶಿಸಿದ 6 ರಿಂದ 18 ವರ್ಷದೊಳಗಿನ ಬಾಲಕರಿಗೆ ಹೊಯ್ಸಳ ಮತ್ತು ಬಾಲಕಿಯರಿಗೆ ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿ ಪ್ರಧಾನ ಮಾಡಲಾಗುತ್ತದೆ. ಪ್ರಕರಣವು ದಿನಾಂಕ:01-08-2025 ರಿಂದ 31-07-2026 ರೊಳಗೆ ನಡೆದಿರಬೇಕು ಪ್ರಶಸ್ತಿಗೆ ಆಯ್ಕೆಯಾದ ಮಕ್ಕಳಿಗೆ ತಲಾ ರೂ. 10 ಸಾವಿರ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ಒಳಗೊಂಡಿರುತ್ತದೆ.

ಇದೇ ಸಂದರ್ಭದಲ್ಲಿ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಕನಿಷ್ಠ 5 ವರ್ಷಗಳ ಕಾಲ ಅತ್ಯುತ್ತಮ ಸೇವೆಸಲ್ಲಿಸಿರುವ ವ್ಯಕ್ತಿಗಳಿಗೆ ತಲಾ ರೂ.25 ಸಾವಿರ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ಹಾಗೂ ಸಂಸ್ಥೆಗಳಿಗೆ ತಲಾ ರೂ.1 ಲಕ್ಷ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರವನ್ನು ನೀಡಿ ಗೌರವಿಸಲಾಗುತ್ತದೆ.


ಮಕ್ಕಳ ದಿನಾಚರಣೆ-2026 ನೇ ಸಾಲಿನ ಪ್ರಶಸ್ತಿಗಾಗಿ ನಿಗಧಿ ಪಡಿಸಿರುವ ಅರ್ಜಿ ನಮೂನೆಗಳನ್ನು ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಚೈನ್‍ಗೇಟ್ ಹತ್ತಿರ, ಮೈಸೂರು ರಸ್ತೆ ಮಡಿಕೇರಿ ಇವರಿಂದ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ದಿನಾಂಕ:20-08-2026ರೊಳಗೆ ಉಪ ನಿರ್ದೇಶಕರ ಕಚೇರಿಗೆ ಸಲ್ಲಿಸಲು ಕೋರಲಾಗಿದೆ.

ದಿನಾಂಕದ ನಂತರ ಸಲ್ಲಿಸಿದ ಅರ್ಜಿಯನ್ನು ಯಾವುದೇ ಕಾರಣಕ್ಕೂ ಪರಿಗಣಿಸಲಾಗುವುದಿಲ್ಲ. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ: 08272-228010, 9482194105 ಸಂಪರ್ಕಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಪ್ರಸನ್ನ ಕುಮಾರ ಅವರು ತಿಳಿಸಿದ್ದಾರೆ.

Continue Reading

Kodagu

ವಿಶ್ವ ಮಿಕ್ಸ್ ಬಾಕ್ಸಿಂಗ್ ಚಾಂಪಿಯನ್ ಶಿಪ್ ಗೆ ಕೊಡಗಿನ 9 ವಿದ್ಯಾರ್ಥಿಗಳು ಆಯ್ಕೆ

Published

on

ಮಡಿಕೇರಿ : ಇದೇ ಜು.29 ರಿಂದ 31 ರ ವರೆಗೆ ನೇಪಾಳದ ಕಾಟ್ಮಂಡ್ ನಲ್ಲಿ ನಡೆಯುವ ವಿಶ್ವ ಮಿಕ್ಸ್ ಬಾಕ್ಸಿಂಗ್ ಚಾಂಪಿಯನ್ ಶಿಪ್ ಗೆ ಭಾರತ ತಂಡಕ್ಕೆ ಕರ್ನಾಟಕ ರಾಜ್ಯದಿಂದ 21 ಕ್ರೀಡಾಪಟುಗಳು ಆಯ್ಕೆಯಾಗಿದ್ದಾರೆ ಎಂದು ಕರ್ನಾಟಕ ಮಿಕ್ಸ್ ಬಾಕ್ಸಿಂಗ್ ಅಸೋಸಿಯೇಷನ್ ನ ಪ್ರಧಾನ ಕಾರ್ಯದರ್ಶಿ ಎನ್.ಸಿ.ಸುದರ್ಶನ್ ತಿಳಿಸಿದ್ದಾರೆ.


ಕೊಡಗು ಜಿಲ್ಲೆಯಿಂದ ಮಿಥಶ್ ಜೆ., ರೀತನ್ ಡಿ.ಎಸ್,, ಅಜಯ್ ಎನ್.ಎಸ್., ಶ್ರಿಯಾನ್ ಗೌಡ, ಯಾಸಿನ್, ಹಫೀಸ್, ಕೌಶಿಕ್ ಕುಮಾರ್ ಯು.ಸಿ., ಮನ್ಸಿತ್ ಮೋಹನ್ ಹಾಗೂ ಸ್ವಾತಿಕ್ ಬಿ.ಎಸ್ ಆಯ್ಕೆಯಾಗಿದ್ದಾರೆ ಎಂದು ಅವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ.

Continue Reading

Kodagu

ಹಾರಂಗಿ ಜಲಾಶಯದ ನೀರು ಕುಡಿಯಲು ಮಾತ್ರ: ರೈತರಿಗೆ ಬೆಳೆ ಬೆಳೆಯದಂತೆ ಮನವಿ

Published

on

ಕುಶಾಲನಗರ: ಮುಂಗಾರು ಮಳೆಯ ಕೊರತೆಯಿಂದ ಹಾರಂಗಿ ಜಲಾಶಯಕ್ಕೆ ನೀರಿನ ಒಳಹರಿವು ಗಣನೀಯವಾಗಿ ಕಡಿಮೆಯಾಗಿದೆ. 2026-27ನೇ ಸಾಲಿನ ಜೂನ್ 1 ರಿಂದ ಜುಲೈ 21 ರವರೆಗೆ ಜಲಾಶಯದಲ್ಲಿ ಕೇವಲ 5.848 ಟಿಎಂಸಿ ನೀರು ಮಾತ್ರ ಲಭ್ಯವಿದೆ ಎಂದು ಕಾವೇರಿ ನೀರಾವರಿ ನಿಗಮ ತಿಳಿಸಿದೆ.

ಈ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಉದ್ದೇಶಕ್ಕೆ ಮಾತ್ರ ನೀರನ್ನು ಮೀಸಲಿಡಲು ಸರ್ಕಾರ ನಿರ್ಧರಿಸಿದೆ. ಜುಲೈ 2 ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿಗಳು “ಜಲಾಶಯ ನಂಬಿಕೊಂಡು ಯಾವ ರೈತರೂ ಬೆಳೆ ಹಾಕಬೇಡಿ” ಎಂದು ಸೂಚಿಸಿದ್ದಾರೆ.

ಈಗಾಗಲೇ ಫೆಬ್ರವರಿ 26 ಮತ್ತು ಜೂನ್ 5 ರ ಸರ್ಕಾರದ ಆದೇಶದಂತೆ ಜಲಾಶಯದ ನೀರನ್ನು ಕುಡಿಯಲು ಮಾತ್ರ ಬಳಸಲಾಗುತ್ತಿದೆ. ಜಿಲ್ಲಾಡಳಿತ ಮತ್ತು ಸ್ಥಳೀಯ ಅಧಿಕಾರಿಗಳು ಇದನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಿದ್ದಾರೆ.

ಈ ಹಿನ್ನೆಲೆಯಲ್ಲಿ ಹಾರಂಗಿ ಜಲಾಶಯದ ನೀರನ್ನು ಅವಲಂಬಿಸಿ ಯಾವುದೇ ಬೆಳೆ ಬೆಳೆಯದಂತೆ ರೈತರು ಹಾಗೂ ಅಚ್ಚುಕಟ್ಟುದಾರರು ಸಹಕರಿಸಬೇಕು ಎಂದು ಕಾವೇರಿ ನೀರಾವರಿ ನಿಗಮದ ಅಧೀಕ್ಷಕ ಎಂಜಿನಿಯರ್ ಮನವಿ ಮಾಡಿದ್ದಾರೆ.

Continue Reading

Trending

error: Content is protected !!