Connect with us

State

ಹಿರಿಯೂರು ಟಿಕೆಟ್ ವಿಚಾರದಲ್ಲಿ ಹೈಕಮಾಂಡ್ ನಿರ್ಧಾರವೇ ಅಂತಿಮ: ಆರ್. ಅಶೋಕ್

Published

on

ಬೆಂಗಳೂರು: ಹಿರಿಯೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಟಿಕೆಟ್ ಹಂಚಿಕೆ ವಿಚಾರದಲ್ಲಿ ಬಿಜೆಪಿ ಮತ್ತು ಜೆಡಿಎಸ್ ನಡುವೆ ಯಾವುದೇ ಗೊಂದಲ ಅಥವಾ ಪ್ರತಿಷ್ಠೆಯ ಪ್ರಶ್ನೆಯಿಲ್ಲ. ಈ ಸಂಬಂಧ ಹೈಕಮಾಂಡ್ ಕೈಗೊಳ್ಳುವ ನಿರ್ಧಾರವೇ ಅಂತಿಮ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಸ್ಪಷ್ಟಪಡಿಸಿದ್ದಾರೆ.

ವಿಕಾಸಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿರಿಯೂರು ಕ್ಷೇತ್ರದ ಟಿಕೆಟ್ ಅನ್ನು ಜೆಡಿಎಸ್‌ಗೆ ಬಿಟ್ಟುಕೊಡಬೇಕೆಂಬ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ಬೇಡಿಕೆಗೆ ಪ್ರತಿಕ್ರಿಯಿಸಿದರು. ಬಿಜೆಪಿ ಮತ್ತು ಜೆಡಿಎಸ್ ಎನ್‌ಡಿಎ ಮೈತ್ರಿಕೂಟದ ಪಾಲುದಾರ ಪಕ್ಷಗಳಾಗಿದ್ದು, ಟಿಕೆಟ್ ಕೇಳುವ ಅಧಿಕಾರ ಎರಡೂ ಪಕ್ಷಗಳಿಗೂ ಇದೆ. ಈ ಹಿಂದೆ ಬಿಜೆಪಿ ಹಾಗೂ ಜೆಡಿಎಸ್ ಎರಡೂ ಪಕ್ಷಗಳು ಕ್ಷೇತ್ರದಲ್ಲಿ ಗೆಲುವು ಸಾಧಿಸಿವೆ. ಕಳೆದ 15 ವರ್ಷಗಳ ಮತದಾನದ ಅಂಕಿಅಂಶಗಳು ಮತ್ತು ಸಮೀಕ್ಷೆಗಳನ್ನು ಆಧರಿಸಿ ಸಮನ್ವಯ ಸಭೆಯಲ್ಲಿ ಚರ್ಚಿಸಲಾಗುವುದು. ಅಂತಿಮವಾಗಿ ಹೈಕಮಾಂಡ್ ಕೈಗೊಳ್ಳುವ ನಿರ್ಧಾರಕ್ಕೆ ಎಲ್ಲರೂ ಬದ್ಧರಾಗಿರುತ್ತೇವೆ ಎಂದು ತಿಳಿಸಿದರು.


2028ರ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರವನ್ನು ಅಧಿಕಾರಕ್ಕೆ ತರಲು ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಸಮನ್ವಯ ಸಮಿತಿಗಳನ್ನು ರಚಿಸಲಾಗುವುದು. ಮುಂಬರುವ ಜಿಲ್ಲಾ ಪಂಚಾಯಿತಿ ಹಾಗೂ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಚುನಾವಣೆಗಳಿಗೂ ಸಿದ್ಧತೆ ನಡೆಸಲಾಗುವುದು ಎಂದರು.

ಇದೇ ವೇಳೆ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅಶೋಕ್, ರಾಜ್ಯದಲ್ಲಿ ಬೆಲೆ ಏರಿಕೆ ಮತ್ತು ತೆರಿಗೆ ಏರಿಕೆಯ ಆಡಳಿತ ನಡೆಯುತ್ತಿದೆ ಎಂದು ಟೀಕಿಸಿದರು. ಹಾಲು, ಅಡುಗೆ ಎಣ್ಣೆ ಹಾಗೂ ಬಸ್ ಪ್ರಯಾಣ ದರ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಆಸ್ತಿ ಮಾರ್ಗಸೂಚಿ ದರವನ್ನೂ ಸರ್ಕಾರ ನಿರಂತರವಾಗಿ ಹೆಚ್ಚಿಸುತ್ತಿದ್ದು, ಸ್ವಂತ ಮನೆ ನಿರ್ಮಿಸಿಕೊಳ್ಳುವುದು ಜನರಿಗೆ ಕಷ್ಟವಾಗಿದೆ. ಕಳೆದ ಮೂರು ವರ್ಷಗಳಲ್ಲಿ ಜನರಿಗೆ ತೊಂದರೆ ನೀಡಿದ್ದೇ ಸರ್ಕಾರದ ಸಾಧನೆ ಎಂದು ಆರೋಪಿಸಿದರು.

ವಿಧಾನ ಪರಿಷತ್ ಚುನಾವಣೆಯಲ್ಲಿ ಎನ್‌ಡಿಎ ನಾಲ್ಕು ಸ್ಥಾನಗಳನ್ನು ಗೆದ್ದಿದ್ದು, ಕಾಂಗ್ರೆಸ್ ಶೂನ್ಯ ಸಾಧನೆ ಮಾಡಿದೆ ಎಂದು ಹೇಳಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದೆಹಲಿ ಭೇಟಿಯನ್ನೂ ವ್ಯಂಗ್ಯವಾಡಿದರು. ಪರೀಕ್ಷೆಯಲ್ಲಿ ಶೂನ್ಯ ಅಂಕ ಪಡೆದ ವಿದ್ಯಾರ್ಥಿಯಂತೆ ಮುಖ್ಯಮಂತ್ರಿ ಶೂನ್ಯ ಅಂಕಪಟ್ಟಿ ಹಿಡಿದು ದೆಹಲಿಗೆ ತೆರಳಿದ್ದಾರೆ. ಅಲ್ಲಿ ಹೈಕಮಾಂಡ್ ಏನು ತೀರ್ಮಾನ ಕೈಗೊಳ್ಳಲಿದೆ ಎಂಬುದನ್ನು ಕಾದು ನೋಡಬೇಕಿದೆ ಎಂದರು.

ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಾಗೂ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಚುನಾವಣೆಯಲ್ಲೂ ಎನ್‌ಡಿಎ ಉತ್ತಮ ಗೆಲುವು ಸಾಧಿಸಲಿದೆ ಎಂದು ಆರ್. ಅಶೋಕ್ ವಿಶ್ವಾಸ ವ್ಯಕ್ತಪಡಿಸಿದರು.

Continue Reading

State

ಕರ್ನಾಟಕ ವಾಯು ಗುಣಮಟ್ಟ ವರದಿ:ಕೊಡಗಿನಲ್ಲಿ ಅತ್ಯುತ್ತಮ ಶುದ್ಧಗಾಳಿ

Published

on

ಬೆಂಗಳೂರು, ಕಲಬುರಗಿ, ಬಳ್ಳಾರಿಯಲ್ಲಿ ವಾಯುಮಾಲಿನ್ಯ ಹೆಚ್ಚಳ

ಚಳಿಗಾಲದ ಆರಂಭದಲ್ಲಿ ಕರ್ನಾಟಕದ ವಾಯು ಗುಣಮಟ್ಟ ಏರಿಳಿತ ಕಂಡಿದೆ. ಬೆಂಗಳೂರು ಸೇರಿದಂತೆ ಕೈಗಾರಿಕಾ ಪ್ರದೇಶಗಳಲ್ಲಿ AQI ‘ಸಾಧಾರಣ’ ಮಟ್ಟದಲ್ಲಿದ್ದರೆ, ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ‘ಅತ್ಯುತ್ತಮ’ವಾಗಿದೆ.
ಕರ್ನಾಟಕದ ಕಾಶ್ಮೀರ ಕೊಡಗಿನಲ್ಲಿ ಅತ್ಯಂತ ಶುದ್ಧ ಗಾಳಿ ಬೀಸುತ್ತಿದೆ.

ಮಾಲಿನ್ಯ ಹೆಚ್ಚಿರುವ ಪ್ರದೇಶಗಳಲ್ಲಿ ಅಸ್ತಮಾ ರೋಗಿಗಳು, ಮಕ್ಕಳು ಮತ್ತು ಹಿರಿಯ ನಾಗರಿಕರು ಮಾಸ್ಕ್ ಧರಿಸುವುದು ಸೂಕ್ತ ಎಂದು ತಜ್ಞರು ಸಲಹೆ ನೀಡಿದ್ದಾರೆ.

ರಾಜ್ಯದಲ್ಲಿ ಚಳಿಗಾಲ ಆರಂಭವಾಗುತ್ತಿದ್ದಂತೆ ಗಾಳಿಯ ವೇಗ ಕಡಿಮೆಯಾಗಿ ವಾಯು ಗುಣಮಟ್ಟ ಸೂಚ್ಯಂಕದಲ್ಲಿ ಏರಿಳಿತ ಕಂಡುಬರುತ್ತಿದೆ. ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ಇಂದಿನ (ನವೆಂಬರ್ 16, ಸೋಮವಾರ) ಮಾಹಿತಿಯ ಪ್ರಕಾರ, ಬೆಂಗಳೂರು ಸೇರಿದಂತೆ ಪ್ರಮುಖ ಕೈಗಾರಿಕಾ ಮತ್ತು ನಗರ ಪ್ರದೇಶಗಳಲ್ಲಿ ವಾಯು ಗುಣಮಟ್ಟ ‘ಸಾಧಾರಣ’ ಮಟ್ಟದಲ್ಲಿದ್ದರೆ, ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ‘ಉತ್ತಮ’ ಮಟ್ಟದಲ್ಲಿದೆ.

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಂದು ಮುಂಜಾನೆ ಮಂಜು ಹಾಗೂ ವಾಹನ ದಟ್ಟಣೆಯ ಪರಿಣಾಮ ಸರಾಸರಿ AQI 108 ದಾಖಲಾಗಿದ್ದು, ‘ಸಾಧಾರಣ’ ವಿಭಾಗದಲ್ಲಿದೆ. ಪೀಣ್ಯ ಕೈಗಾರಿಕಾ ಪ್ರದೇಶ (AQI 128), ಸಿಲ್ಕ್ ಬೋರ್ಡ್ (AQI 122), ವೈಟ್‌ಫೀಲ್ಡ್ (AQI 115) ಹಾಗೂ ಹೆಬ್ಬಾಳ ಭಾಗಗಳಲ್ಲಿ ಧೂಳಿನ ಕಣಗಳ (PM2.5 ಮತ್ತು PM10) ಪ್ರಮಾಣ ಹೆಚ್ಚಾಗಿದೆ. ಜಯನಗರ (AQI 84) ಮತ್ತು ಬಸವನಗುಡಿ ಭಾಗಗಳಲ್ಲಿ ಗಾಳಿಯ ಗುಣಮಟ್ಟ ತುಲನಾತ್ಮಕವಾಗಿ ಉತ್ತಮವಾಗಿದೆ.

ಮಲೆನಾಡು ಮತ್ತು ಕರಾವಳಿ ಭಾಗದ ಕೊಡಗು ಜಿಲ್ಲೆ ಸೇರಿದಂತೆ ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಮತ್ತು ಹಾಸನ ಜಿಲ್ಲೆಗಳಲ್ಲಿ ಹಸಿರು ಹೊದಿಕೆ ಹಾಗೂ ತಂಪಾದ ಗಾಳಿಯಿಂದಾಗಿ ವಾಯು ಗುಣಮಟ್ಟ ಅತ್ಯುತ್ತಮವಾಗಿದೆ. ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾವೇರಿ, ಗದಗ, ಬಾಗಲಕೋಟೆ, ವಿಜಯಪುರ, ಬೀದರ್ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ವಾಯು ಗುಣಮಟ್ಟ ತೃಪ್ತಿಕರವಾಗಿದೆ.

ಕೈಗಾರಿಕಾ ಚಟುವಟಿಕೆಗಳು, ಗಣಿಗಾರಿಕೆ ಮತ್ತು ರಸ್ತೆ ಕಾಮಗಾರಿಗಳ ಧೂಳಿನಿಂದಾಗಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕಲಬುರಗಿ, ಬಳ್ಳಾರಿ, ವಿಜಯನಗರ, ರಾಯಚೂರು, ಯಾದಗಿರಿ, ಬೆಳಗಾವಿ ಮತ್ತು ಹುಬ್ಬಳ್ಳಿ-ಧಾರವಾಡ ಜಿಲ್ಲೆಗಳಲ್ಲಿ AQI 100ರ ಗಡಿ ದಾಟಿದ್ದು, ಸಾಧಾರಣ ವಿಭಾಗದಲ್ಲಿದೆ.

AQI 100ಕ್ಕಿಂತ ಹೆಚ್ಚಿರುವ ಬೆಂಗಳೂರು, ಕಲಬುರಗಿ, ಬಳ್ಳಾರಿ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ಅಸ್ತಮಾ, ಅಲರ್ಜಿ ಮತ್ತು ಶ್ವಾಸಕೋಶದ ಸಮಸ್ಯೆ ಇರುವವರು ಮುಂಜಾನೆ ಹಾಗೂ ಸಂಜೆ ವೇಳೆ ಹೊರಗೆ ಓಡಾಡುವಾಗ ಮಾಸ್ಕ್ ಧರಿಸುವುದು ಉತ್ತಮ. ಧೂಳಿನ ಕಣಗಳ ಪ್ರಮಾಣ ಹೆಚ್ಚಿರುವ ಪ್ರದೇಶಗಳಲ್ಲಿ ಮಕ್ಕಳು ಮತ್ತು ಹಿರಿಯ ನಾಗರಿಕರು ವಾಯುವಿಹಾರಕ್ಕೆ ಹೋಗುವಾಗ ಹೆಚ್ಚಿನ ಎಚ್ಚರಿಕೆ ವಹಿಸಬೇಕು ಎಂದು ಆರೋಗ್ಯ ತಜ್ಞರು ಸಲಹೆಯನ್ನು ನೀಡಿದ್ದಾರೆ.

Continue Reading

State

ಮೂರು ಎಫ್‌ಐಆರ್ ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ ನಟ ಧನ್ವೀರ್

Published

on

ಅವ್ಯಾಚ ಶಬ್ದಗಳಿಂದ ​ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ದಾಖಲಾಗಿರುವ ಮೂರು ಪ್ರತ್ಯೇಕ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಕೋರಿ ನಟ ಧನ್ವೀರ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

​ವಿಜಯಲಕ್ಷ್ಮಿ ಮ್ಯಾನೇಜರ್ ನಾಗರಾಜ್ ನೀಡಿದ ದೂರಿನ್ವಯ ಆರ್.ಆರ್. ನಗರ ಠಾಣೆ, ಭೋಜರಾಜ್ ರೈ ದೂರಿನ ಮೇರೆಗೆ ಬಸವೇಶ್ವರ ನಗರ ಠಾಣೆ ಹಾಗೂ ನಟ ಝೈದ್ ಖಾನ್ ಅಭಿಮಾನಿಗಳ ಸಂಘದ ಅಧ್ಯಕ್ಷ ವಿನಾಯಕ ನೀಡಿದ ದೂರಿನ ಅನ್ವಯ ಚಾಮರಾಜಪೇಟೆ ಮತ್ತು ಬ್ಯಾಟರಾನಪುರ ಪೊಲೀಸ್ ಠಾಣೆಗಳಲ್ಲಿ ಧನ್ವೀರ್ ವಿರುದ್ಧ ಪ್ರಕರಣಗಳು ದಾಖಲಾಗಿದ್ದವು.
ಈ ಎಲ್ಲಾ ಎಫ್‌ಐಆರ್‌ಗಳನ್ನು ರದ್ದುಪಡಿಸುವಂತೆ ಕೋರಿ ಸಲ್ಲಿಸಲಾಗಿರುವ ಅರ್ಜಿಯ ವಿಚಾರಣೆ ಇಂದು ಹೈಕೋರ್ಟ್‌ನಲ್ಲಿ ನಡೆಯಲಿದೆ.

Continue Reading

State

ಕೈಗಾರಿಕಾ ಬೆಳವಣಿಗೆಯಲ್ಲಿ ಕರ್ನಾಟಕದ ಹೊಸ ಮೈಲಿಗಲ್ಲು: ₹2.63 ಲಕ್ಷ ಕೋಟಿ ಹೂಡಿಕೆ, 5.43 ಲಕ್ಷ ಉದ್ಯೋಗ ಸೃಷ್ಟಿ!!

Published

on

ಕೈಗಾರಿಕಾ ಅಭಿವೃದ್ಧಿ ಮತ್ತು ಆರ್ಥಿಕ ಪ್ರಗತಿಯ ಮೂಲಕ ಕರ್ನಾಟಕವು ದೇಶದ ಪ್ರಮುಖ ಹೂಡಿಕೆ ತಾಣವಾಗಿ ಹೊರಹೊಮ್ಮುತ್ತಿದೆ. ರಾಜ್ಯದಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಪೂರಕ ವಾತಾವರಣ ನಿರ್ಮಿಸುವುದು, ಉದ್ಯಮಿಗಳಿಗೆ ಅಗತ್ಯ ಸೌಲಭ್ಯ ಕಲ್ಪಿಸುವುದು ಹಾಗೂ ಯುವಜನತೆಗೆ ಹೆಚ್ಚಿನ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ನಿಟ್ಟಿನಲ್ಲಿ ಸರ್ಕಾರ ಹಲವು ಮಹತ್ವದ ಕ್ರಮಗಳನ್ನು ಕೈಗೊಳ್ಳುತ್ತಿದೆ. ಇದರ ಫಲವಾಗಿ ಕಳೆದ ಮೂರು ವರ್ಷಗಳಲ್ಲಿ ರಾಜ್ಯವು ಕೈಗಾರಿಕಾ ಕ್ಷೇತ್ರದಲ್ಲಿ ಗಮನಾರ್ಹ ಸಾಧನೆ ಮಾಡಿದೆ.

1,691 ಕೈಗಾರಿಕಾ ಯೋಜನೆಗಳಿಗೆ ಉತ್ತೇಜನ:
ಕಳೆದ ಮೂರು ವರ್ಷಗಳ ಅವಧಿಯಲ್ಲಿ ಕರ್ನಾಟಕವು ಒಟ್ಟು 1,691 ಕೈಗಾರಿಕಾ ಯೋಜನೆಗಳ ಮೂಲಕ ₹2.63 ಲಕ್ಷ ಕೋಟಿಗೂ ಅಧಿಕ ಹೂಡಿಕೆಯನ್ನು ಆಕರ್ಷಿಸಿದೆ. ಈ ಮೂಲಕ ರಾಜ್ಯದ ಕೈಗಾರಿಕಾ ವಲಯಕ್ಕೆ ಹೊಸ ಚೈತನ್ಯ ದೊರೆತಿದ್ದು, ದೇಶೀಯ ಹಾಗೂ ವಿದೇಶಿ ಹೂಡಿಕೆದಾರರ ವಿಶ್ವಾಸವನ್ನು ಗಳಿಸುವಲ್ಲಿ ಕರ್ನಾಟಕ ಯಶಸ್ವಿಯಾಗಿದೆ. ವಿವಿಧ ಕ್ಷೇತ್ರಗಳಲ್ಲಿ ಕೈಗಾರಿಕಾ ಯೋಜನೆಗಳಿಗೆ ಉತ್ತೇಜನ ನೀಡುವ ಮೂಲಕ ರಾಜ್ಯದ ಆರ್ಥಿಕ ಬೆಳವಣಿಗೆಗೆ ಭದ್ರ ಬುನಾದಿ ಹಾಕಲಾಗುತ್ತಿದೆ.

5.43 ಲಕ್ಷಕ್ಕೂ ಅಧಿಕ ಉದ್ಯೋಗಾವಕಾಶಗಳ ಸೃಷ್ಟಿ:
ಕೈಗಾರಿಕಾ ಹೂಡಿಕೆ ಹೆಚ್ಚಳವು ಕೇವಲ ಆರ್ಥಿಕ ಅಭಿವೃದ್ಧಿಗೆ ಸೀಮಿತವಾಗದೆ, ಉದ್ಯೋಗ ಸೃಷ್ಟಿಗೂ ಮಹತ್ವದ ಕೊಡುಗೆ ನೀಡಿದೆ. 1,691 ಕೈಗಾರಿಕಾ ಯೋಜನೆಗಳ ಮೂಲಕ 5.43 ಲಕ್ಷಕ್ಕೂ ಹೆಚ್ಚು ಉದ್ಯೋಗಾವಕಾಶಗಳು ಸೃಷ್ಟಿಯಾಗಿವೆ. ಇದರಿಂದ ಯುವಜನತೆಗೆ ಉದ್ಯೋಗ ಪಡೆಯಲು ಹೆಚ್ಚಿನ ಅವಕಾಶಗಳು ದೊರೆಯುತ್ತಿದ್ದು, ಅವರ ಆರ್ಥಿಕ ಸ್ವಾವಲಂಬನೆಗೂ ನೆರವಾಗುತ್ತಿದೆ.

ಯುವಜನರ ಭವಿಷ್ಯಕ್ಕೆ ಸರ್ಕಾರದ ಬದ್ಧತೆ:
ಹೂಡಿಕೆದಾರರಿಗೆ ಕರ್ನಾಟಕವನ್ನು ನೆಚ್ಚಿನ ತಾಣವನ್ನಾಗಿ ರೂಪಿಸುವುದರ ಜೊತೆಗೆ, ಯುವಜನತೆಗೆ ಉತ್ತಮ ಉದ್ಯೋಗಾವಕಾಶಗಳನ್ನು ಒದಗಿಸುವುದು ಸರ್ಕಾರದ ಪ್ರಮುಖ ಸಂಕಲ್ಪವಾಗಿದೆ. ಕೈಗಾರಿಕಾ ಅಭಿವೃದ್ಧಿ, ಬಂಡವಾಳ ಹೂಡಿಕೆ ಮತ್ತು ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡುವ ಮೂಲಕ ಸಮೃದ್ಧ ಹಾಗೂ ಸ್ವಾವಲಂಬಿ ಕರ್ನಾಟಕ ನಿರ್ಮಾಣದತ್ತ ಸರ್ಕಾರ ಮುನ್ನಡೆಯುತ್ತಿದೆ.

Continue Reading

Trending

error: Content is protected !!