Manglore
ಧರ್ಮಸ್ಥಳ, ಸೌತಡ್ಕ ಮಹಾಗಣಪತಿ ಕ್ಷೇತ್ರಕ್ಕೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಭೇಟಿ
ಬೆಳ್ತಂಗಡಿ: ಕೇಂದ್ರ ಕೈಗಾರಿಕೆ ಮತ್ತು ಉಕ್ಕು ಸಚಿವ, ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಕುಟುಂಬ ಸಮೇತರಾಗಿ ಬೆಳ್ತಂಗಡಿ ತಾಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳಾದ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.
ಸೋಮವಾರ ಸಂಜೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿದ ಕುಮಾರಸ್ವಾಮಿ ಹಾಗೂ ಕುಟುಂಬದವರನ್ನು ಪೂರ್ಣಕುಂಭ ಸ್ವಾಗತದೊಂದಿಗೆ ಭವ್ಯ ಮೆರವಣಿಗೆಯಲ್ಲಿ ಬರಮಾಡಿಕೊಳ್ಳಲಾಯಿತು. ಬಳಿಕ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಸಚಿವರು ವಿಶೇಷ ರಂಗಪೂಜೆ ಸೇವೆ ಸಲ್ಲಿಸಿದರು. ರಾತ್ರಿ ಕ್ಷೇತ್ರದ ಶ್ರೀಸನ್ನಿಧಿ ಅತಿಥಿಗೃಹದಲ್ಲಿ ಕುಟುಂಬ ಸಮೇತ ವಾಸ್ತವ್ಯ ಹೂಡಿದರು.

ಮಂಗಳವಾರ ಬೆಳಗ್ಗೆ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಭೇಟಿ ನೀಡಿದ ಅವರು ಗಣಪತಿಗೆ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥನೆ ನೆರವೇರಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುಬ್ರಹ್ಮಣ್ಯ ಸಬರಾಯ ಅವರು ಸಚಿವರನ್ನು ಗೌರವಿಸಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಸಚಿವರ ಪತ್ನಿ ಅನಿತಾ ಕುಮಾರಸ್ವಾಮಿ, ಪುತ್ರ ನಿಖಿಲ್ ಕುಮಾರಸ್ವಾಮಿ, ಸೊಸೆ ರೇವತಿ ನಿಖಿಲ್ ಕುಮಾರಸ್ವಾಮಿ ಹಾಗೂ ವಿಧಾನಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ ಉಪಸ್ಥಿತರಿದ್ದರು.
Manglore
ಸುರತ್ಕಲ್‌ನಲ್ಲಿ ಆಹಾರ ಸುರಕ್ಷತಾ ಇಲಾಖೆಯ ದಿಢೀರ್ ದಾಳಿ – ಹೋಟೆಲ್, ರೆಸ್ಟೋರೆಂಟ್‌ಗಳ ವಿರುದ್ಧ ಪ್ರಕರಣ
ಮಂಗಳೂರು: ಆರೋಗ್ಯ ಸಚಿವ ಯು.ಟಿ. ಖಾದರ್ ಅವರ ಸೂಚನೆಯ ಮೇರೆಗೆ ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್ ವ್ಯಾಪ್ತಿಯಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ವತಿಯಿಂದ ಹೋಟೆಲ್, ರೆಸ್ಟೋರೆಂಟ್ ಹಾಗೂ ಆಹಾರ ವಿತರಣಾ ಘಟಕಗಳ ಮೇಲೆ ದಾಳಿ ನಡೆಸಲಾಯಿತು.
ಜಿಲ್ಲಾ ಆಹಾರ ಸುರಕ್ಷತಾ ಅಂಕಿತ ಅಧಿಕಾರಿ ಡಾ. ಪ್ರವೀಣ್ ಕುಮಾರ್ ಸಿ.ಎಚ್. ನೇತೃತ್ವದಲ್ಲಿ ಐದು ತಂಡಗಳಿಂದ ಸುರತ್ಕಲ್ ವ್ಯಾಪ್ತಿಯ ಹೋಟೆಲ್, ರೆಸ್ಟೋರೆಂಟ್ ಹಾಗೂ ಆಹಾರ ವಿತರಣಾ ಘಟಕಗಳ ಮೇಲೆ ದಾಳಿ ನಡೆಯಿತು.

ಸೂರಜ್ ಇಂಟರ್‌ನ್ಯಾಷನಲ್ ಹೋಟೆಲ್, ಮೋರ್ ರಿಟೇಲ್ ಮಳಿಗೆ, ಬ್ಲಿಂಕ್‌ಇಟ್ ಆನ್‌ಲೈನ್ ಪ್ಲಾಟ್‌ಫಾರ್ಮ್, ಮೆಕ್‌ಡೊನಾಲ್ಡ್ಸ್ ರೆಸ್ಟೋರೆಂಟ್ ಹಾಗೂ ಎನ್‌ಐಟಿಕೆ ವಿದ್ಯಾರ್ಥಿಗಳ ಹಾಸ್ಟೆಲ್‌ಗಳಿಗೆ ಆಹಾರ ಪೂರೈಸುವ ಅಡುಗೆ ಘಟಕಗಳಲ್ಲಿ ತಪಾಸಣೆ ನಡೆಸಲಾಯಿತು.
ಸೂರಜ್ ಇಂಟರ್‌ನ್ಯಾಷನಲ್ ಹೋಟೆಲ್‌ನಲ್ಲಿ ನೈರ್ಮಲ್ಯ ಕಾಪಾಡದ ಹಿನ್ನೆಲೆಯಲ್ಲಿ ಎಡಿಸಿ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಲು ಕ್ರಮ ಕೈಗೊಳ್ಳಲಾಗಿದೆ. ಮೆಕ್‌ಡೊನಾಲ್ಡ್ಸ್ ರೆಸ್ಟೋರೆಂಟ್‌ನ ಅಡುಗೆ ಕೋಣೆಯಲ್ಲಿಯೂ ನೈರ್ಮಲ್ಯ ಕೊರತೆ ಕಂಡುಬಂದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಈ ಎರಡೂ ಸಂಸ್ಥೆಗಳಿಂದ ಆಹಾರ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.
Manglore
ಬೈಕಂಪಾಡಿ ಫಾರ್ಚುನ್ ಇಂಡಸ್ಟ್ರೀಸ್ ಘಟಕಕ್ಕೆ ಬೀಗಮುದ್ರೆ
ಮಂಗಳೂರು: ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿರುವ ಫಾರ್ಚುನ್ ಇಂಡಸ್ಟ್ರೀಸ್‌ನ ಚೀಸ್ ಬಾಲ್ ಸ್ನ್ಯಾಕ್ಸ್ ತಯಾರಿಕಾ ಘಟಕದಲ್ಲಿ ಹೆಗ್ಗಣಗಳು ಓಡಾಡುತ್ತಿರುವುದು ಹಾಗೂ ತೀವ್ರ ಅನೈರ್ಮಲ್ಯ ಕಂಡುಬಂದ ಹಿನ್ನೆಲೆಯಲ್ಲಿ ಘಟಕವನ್ನು ಸೀಲ್ ಮಾಡಿ ಮುಚ್ಚಲಾಗಿದೆ.

ಆರೋಗ್ಯ ಸಚಿವ ಯು.ಟಿ. ಖಾದರ್ ಅವರ ಸೂಚನೆಯ ಮೇರೆಗೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ನಡೆಸಿದ ಅನಿರೀಕ್ಷಿತ ತಪಾಸಣೆ ವೇಳೆ ಜಿಲ್ಲಾ ಆಹಾರ ಸುರಕ್ಷತಾ ಅಂಕಿತ ಅಧಿಕಾರಿ ಡಾ. ಪ್ರವೀಣ್ ಕುಮಾರ್ ಸಿ.ಎಚ್. ನೇತೃತ್ವದ ತಂಡ ಈ ಕ್ರಮ ಕೈಗೊಂಡಿದೆ.
Manglore
ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ
ಉಡುಪಿ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಮೂರೂವರೆ ವರ್ಷಗಳು ಕಳೆದಿವೆ. ಆದರೆ ಹೇಳಿಕೊಳ್ಳುವಂತಹ ಯಾವುದೇ ಸಾಧನೆ ಮಾಡಿಲ್ಲ. ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವ ಮೂಲಕ ತಮ್ಮ ಭರವಸೆಗಳನ್ನು ಈಡೇರಿಸಿದ್ದೇವೆ ಎಂದು ಸರ್ಕಾರ ಹೇಳಿಕೊಳ್ಳುತ್ತಿದೆ. ಆದರೆ ಈ ಐದು ಗ್ಯಾರಂಟಿಗಳ ಅನುಷ್ಠಾನಕ್ಕೆ ರಾಜ್ಯ ಸರ್ಕಾರದ ಕೊಡುಗೆ ಏನು? ಇದರ ಆರ್ಥಿಕ ಹೊರೆಯನ್ನು ಯಾರ ಮೇಲೆ ಹಾಕಲಾಗುತ್ತಿದೆ ಎಂದು ಪ್ರಶ್ನಿಸಿದರು.
ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕದ ಜನರು ಕಷ್ಟಪಟ್ಟು ದುಡಿಯುತ್ತಿದ್ದಾರೆ. ತೆರಿಗೆ ರೂಪದಲ್ಲಿ ರಾಜ್ಯದ ಬೊಕ್ಕಸಕ್ಕೆ ಹಣ ತುಂಬುತ್ತಿದ್ದಾರೆ. ಮುಖ್ಯಮಂತ್ರಿ ಅಥವಾ ಉಪಮುಖ್ಯಮಂತ್ರಿಗಳಿಗಿಂತ ರಾಜ್ಯದ ಜನರು ಹೆಚ್ಚಿನ ಕೊಡುಗೆ ನೀಡುತ್ತಿದ್ದಾರೆ. ಆದರೆ ಸರ್ಕಾರ ಮಾತ್ರ ವಿವಿಧ ಕ್ಷೇತ್ರಗಳಲ್ಲಿ ತೆರಿಗೆ ಹೆಚ್ಚಿಸುವ ಮೂಲಕ ಹಣ ಸಂಗ್ರಹಿಸುತ್ತಿದೆ. ಜನರ ಹಣವನ್ನು ದುರುಪಯೋಗಪಡಿಸುತ್ತಿದೆ ಎಂದರು.
ಕರಾವಳಿ ಭಾಗದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಭಾಗದ ಅಭಿವೃದ್ಧಿಗೆ 35 ಸಾವಿರ ಕೋಟಿ ರೂಪಾಯಿ ಅನುದಾನ ಘೋಷಣೆ ಮಾಡಲಾಗಿತ್ತು. ಘೋಷಣೆ ಮಾಡಿ ಎರಡರಿಂದ ಮೂರು ತಿಂಗಳು ಕಳೆದಿವೆ. ಆದರೆ ಆ ಹಣ ಎಲ್ಲಿದೆ?. ಕೇವಲ ಘೋಷಣೆಗಳ ಮೂಲಕ ಕರಾವಳಿ ಭಾಗದ ಜನರನ್ನು ಸಮಾಧಾನಪಡಿಸಬಹುದು ಎಂದು ಸರ್ಕಾರ ಭಾವಿಸಿದ್ದರೆ, ಮುಂದಿನ ಪರಿಣಾಮಗಳನ್ನು ಎದುರಿಸಲು ಕಾಂಗ್ರೆಸ್ ಪಕ್ಷ ಸಿದ್ಧವಾಗಿರಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕಾಂಗ್ರೆಸ್‌ನವರು ಪದೇಪದೇ ಹೆಚ್ ಡಿ ಕುಮಾರಸ್ವಾಮಿ ಅವರಿಗೆ ಹೊಟ್ಟೆಕಿಚ್ಚು, ಸುಳ್ಳೇ ಅವರ ಕುಟುಂಬದ ದೇವರು ಎಂದು ಆರೋಪಿಸುತ್ತಾರೆ. ಆದರೆ ಜನರಿಗೆ ಸುಳ್ಳು ಹೇಳಿ ವಂಚಿಸುತ್ತಿರುವುದು ರಾಜ್ಯ ಸರ್ಕಾರವೇ ಹೊರತು ನಾವಲ್ಲ ಎಂದರು.
ಹಾಸನದ ಹಾಸನಾಂಬ ದೇವಸ್ಥಾನದಿಂದ 29 ಕೋಟಿ ರೂಪಾಯಿ ಆದಾಯ ಸಂಗ್ರಹವಾಗಿದೆ. 2025ರಲ್ಲಿ ಬಸ್ ಪ್ರಯಾಣ ದರವನ್ನು ಶೇ.35ರಷ್ಟು ಹೆಚ್ಚಿಸಲಾಗಿತ್ತು. ಇದೀಗ ಮತ್ತೆ ಶೇ.45ರಷ್ಟು ದರ ಏರಿಕೆ ಮಾಡಲಾಗಿದೆ. ಅಬಕಾರಿ ಇಲಾಖೆಯಿಂದ ಸುಮಾರು 40ಸಾವಿರ ಕೋಟಿ ರೂ. ಆದಾಯ ಸಂಗ್ರಹವಾಗುತ್ತಿದೆ. ಪಂಚ ಗ್ಯಾರಂಟಿ ಯೋಜನೆಗಳ ಬಗ್ಗೆ ನನಗೆ ಯಾವುದೇ ವಿರೋಧವಿಲ್ಲ. ಆದರೆ ಅಭಿವೃದ್ಧಿ ಕಾರ್ಯಗಳು ಸಂಪೂರ್ಣ ಸ್ಥಗಿತಗೊಂಡಿವೆ. ಸರ್ಕಾರ ಜನರ ಬದುಕನ್ನು ಸಂಕಷ್ಟಕ್ಕೆ ದೂಡುತ್ತಿದೆ. ಭಾರತ್ ಜೋಡೋ ಅಭಿಯಾನದ ಬಗ್ಗೆ ತೋರುವ ಕಾಳಜಿಯನ್ನು ರೈತರ ವಿಚಾರದಲ್ಲಿ ತೋರುತ್ತಿಲ್ಲ ಎಂದು ಕುಮಾರಸ್ವಾಮಿ ಹೇಳಿದರು.
ಕಬ್ಬು ಬೆಳೆಗಾರರು ಪ್ರತಿಭಟನೆ ನಡೆಸಿದರೂ ಅವರಿಗೆ ಯಾವುದೇ ಪ್ರಯೋಜನವಾಗಿಲ್ಲ. ರಾಜ್ಯ ಸರ್ಕಾರ ಈವರೆಗೂ ಕಬ್ಬು ಬೆಳೆಗಾರರ ನೆರವಿಗೆ ಬಂದಿಲ್ಲ. ಸಮರ್ಪಕವಾಗಿ ನೀರು ಹಂಚಿಕೆ ಮಾಡದ ಕಾರಣ ಕಬ್ಬಿನ ಬೆಳೆ ಸಂಪೂರ್ಣ ನಾಶವಾಗಿದೆ. ಮತ್ತೊಂದೆಡೆ, ಕೆಲವು ಸಕ್ಕರೆ ಕಾರ್ಖಾನೆಗಳ ಮಾಲೀಕರು ಹೆಲಿಕಾಪ್ಟರ್‌ನಲ್ಲಿ ಓಡಾಡುತ್ತಿದ್ದಾರೆ. ರೈತರು ಭಾರಿ ನಷ್ಟ ಅನುಭವಿಸುತ್ತಿರುವಾಗ ಇಂತಹ ಪರಿಸ್ಥಿತಿಯನ್ನು ಹೇಗೆ ಸಮರ್ಥಿಸಿಕೊಳ್ಳಲು ಸಾಧ್ಯಎಂದರು.

ಹಿರಿಯೂರು ಉಪಚುನಾವಣೆ ವಿಚಾರಕ್ಕೆ ಪ್ರತಿಕ್ರಿಯೆ:
ಹಿರಿಯೂರು ಉಪಚುನಾವಣೆ ಕುರಿತು ಎಚ್.ಡಿ. ಕುಮಾರಸ್ವಾಮಿ ಮಾತನಾಡಿ, ಬಿಜೆಪಿ ತನ್ನ ಅಭ್ಯರ್ಥಿಗಳು ಚುನಾವಣೆಯಲ್ಲಿ ಸ್ಪರ್ಧಿಸಬೇಕೆಂದು ಬಯಸುತ್ತಿದೆ. ಆದರೆ ಸಾಂಪ್ರದಾಯಿಕವಾಗಿ ಹಿರಿಯೂರು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ಸ್ಪರ್ಧೆ ನಡೆಯುತ್ತಾ ಬಂದಿದೆ. 2013ರಲ್ಲಿ ಜೆಡಿಎಸ್ ಅಭ್ಯರ್ಥಿ ಕೇವಲ ಒಂದು ಸಾವಿರ ಮತಗಳ ಅಂತರದಿಂದ ಸೋತಿದ್ದರು. 2018ರಲ್ಲಿ ಅನುಕಂಪದ ಆಧಾರದ ಮೇಲೆ ಬಿಜೆಪಿ ಅಭ್ಯರ್ಥಿ ಗೆಲುವು ಸಾಧಿಸಿದ್ದರು. ವೈಯಕ್ತಿಕವಾಗಿ ಹಿರಿಯೂರು ವಿಧಾನಸಭಾ ಕ್ಷೇತ್ರದ ವಿಚಾರದಲ್ಲಿ ನನಗೆ ಯಾವುದೇ ಪ್ರತಿಷ್ಠೆಯ ಪ್ರಶ್ನೆ ಇಲ್ಲ. ಈ ವಿಚಾರದಲ್ಲಿ ನನಗೆ ಯಾವುದೇ ಗೊಂದಲವೂ ಇಲ್ಲ ಎಂದರು.
ಇದೀಗ ಹಿರಿಯೂರು ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಗೆಲ್ಲುವ ಉತ್ತಮ ಅವಕಾಶವಿದೆ ಎಂದು ಬಿಜೆಪಿ ನಾಯಕರಿಗೆ ಮನವಿ ಮಾಡಿದ್ದೇನೆ. ಹಿರಿಯೂರು ಕ್ಷೇತ್ರದಲ್ಲಿ ಜೆಡಿಎಸ್ ಸುಮಾರು 40 ಸಾವಿರ ಮತಗಳ ಮತಬ್ಯಾಂಕ್ ಹೊಂದಿದೆ. ಹೀಗಾಗಿ ಜೆಡಿಎಸ್ ಗೆಲುವು ಸಾಧಿಸುವ ಸಾಧ್ಯತೆ ಇದೆ. ಹಿರಿಯೂರು ವಿಚಾರದಲ್ಲಿ ಯಾವುದೇ ಗೊಂದಲ ಅಥವಾ ಪ್ರತಿಷ್ಠೆಯ ಪ್ರಶ್ನೆ ಇಲ್ಲ. ನಾವು ತಾಳ್ಮೆಯಿಂದ ಇದ್ದೇವೆ. ಮುಂದೆಯೂ ತಾಳ್ಮೆಯಿಂದ ಇರುತ್ತೇವೆ ಎಂದರು.
ರಾಜ್ಯದ ಸಂಕಷ್ಟ, ಬರ ಪರಿಹಾರಕ್ಕೆ ಪ್ರಾರ್ಥನೆ:
ಕರಾವಳಿಯು ಧಾರ್ಮಿಕ ಹಾಗೂ ಶೈಕ್ಷಣಿಕ ಕೇಂದ್ರಗಳ ಸಂಗಮವಾಗಿದೆ. ನಮ್ಮದು ದೇವರಲ್ಲಿ ಅಪಾರ ನಂಬಿಕೆ ಹೊಂದಿರುವ ಕುಟುಂಬ. ಹಾಗಾಗಿ ರಾಜ್ಯವನ್ನು ಕಾಡುತ್ತಿರುವ ಸಂಕಷ್ಟ ಹಾಗೂ ಬರ ಪರಿಸ್ಥಿತಿ ನಿವಾರಣೆಯಾಗಲಿ ಎಂದು ಕೊಲ್ಲೂರು ಮೂಕಾಂಬಿಕಾ ದೇವಿಯಲ್ಲಿ ಪ್ರಾರ್ಥನೆ ಸಲ್ಲಿಸಿದ್ದೇನೆ ಎಂದು ಹೆಚ್ ಡಿ ಕುಮಾರಸ್ವಾಮಿ ಹೇಳಿದರು.
-
Chamarajanagar13 hours agoನಿರ್ಮಿತಿ ಕೇಂದ್ರದ ಯೋಜನಾ ವ್ಯವಸ್ಥಾಪಕರ ಹುದ್ದೆಗೆ ಅರ್ಜಿ ಆಹ್ವಾನ
-
Kodagu15 hours agoಖಾಯಂ ಹುದ್ದೆಗಾಗಿ ಅರ್ಜಿ ಆಹ್ವಾನ
-
Hassan15 hours agoಬೇಲೂರಿನಿಂದ 56 ಕಾಡಾನೆಗಳ ಸ್ಥಳಾಂತರಕ್ಕೆ ಸರ್ಕಾರದ ಆದೇಶ: ಸಚಿವ ಕೆ.ಎಂ. ಶಿವಲಿಂಗೇಗೌಡ ಘೋಷಣೆ
-
Mandya15 hours agoಖಾಸಗಿ ಶಿಕ್ಷಣ ಸಂಸ್ಥೆಯಿಂದ ಸರ್ಕಾರಿ ಜಮೀನು ಒತ್ತುವರಿ : ಅಧಿಕಾರಿಗಳಿಂದ ತೆರವು ಕಾರ್ಯ
-
State20 hours agoಕರ್ನಾಟಕ ವಾಯು ಗುಣಮಟ್ಟ ವರದಿ:ಕೊಡಗಿನಲ್ಲಿ ಅತ್ಯುತ್ತಮ ಶುದ್ಧಗಾಳಿ
-
State21 hours agoಮೂರು ಎಫ್ಐಆರ್ ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ ನಟ ಧನ್ವೀರ್
-
Hassan23 hours agoಬೇಲೂರಿನಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಬ*ಲಿ: ಕಾಫಿ ತೋಟಕ್ಕೆ ತೆರಳುತ್ತಿದ್ದ ಕಾರ್ಮಿಕ ಸಾ*ವು
-
State57 minutes agoಅಸಂಜ್ಞೆಯ ಅಪರಾಧಗಳ ತನಿಖೆಗೆ ಮ್ಯಾಜಿಸ್ಟ್ರೇಟ್ ಪೂರ್ವಾನುಮತಿ ಕಡ್ಡಾಯ: ಹೈಕೋರ್ಟ್ ಮಹತ್ವದ ಆದೇಶ
